ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮತ್ತು ಉಜಿರೆಯಲ್ಲಿ ಪರಿಸ್ಥಿತಿ ಶಾಂತವಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಹೇಳಿದ್ದಾರೆ
ಧರ್ಮಸ್ಥಳ ಪೊಲೀಸ್ ಠಾಣೆಗೆ ಭೇಟಿ ನೀಡಿದ ಅವರು, ಯೂಟ್ಯೂಬರ್ ಗಳ ಮೇಲೆ ಹಲ್ಲೆ ಹಾಗೂ ಉಜಿರೆಯಲ್ಲಿ ಖಾಸಗಿ ಚಾನಲ್ ವರದಿಗಾರನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದೂರುಗಳನ್ನು ಸ್ವೀಕರಿಸಲಾಗಿದೆ. ಧರ್ಮಸ್ಥಳದ ನೇತ್ರಾವತಿ ಪಾಂಗಳದಲ್ಲಿ, ಪೊಲೀಸ್ ಠಾಣಾ ಆವರಣದಲ್ಲಿ, ಉಜಿರೆಯ ಖಾಸಗಿ ಆಸ್ಪತ್ರೆ ಎದುರು ಕಾನೂನುಬಾಹಿರವಾಗಿ ಗುಂಪು ಸೇರಿದವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.
ಹಲ್ಲೆಗೊಳಗಾದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಯಾವುದೇ ಗಂಭೀರ ಗಾಯಗಳಾಗಿಲ್ಲ. ಘಟನೆಯ ವಿಡಿಯೋ ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.