ವಿಜಯಪುರ: ಜಿಲ್ಲೆಯ ಭೂತನಾಳ ಕೆರೆಯಲ್ಲಿ ಇಂದು ಬೆಳಗ್ಗೆ 6 ಶವಗಳು ಪತ್ತೆಯಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮೃತರಲ್ಲಿ ನಾಲ್ವರು ಮಹಿಳೆಯರು ಹಾಗೂ ಇಬ್ಬರು ಬಾಲಕರಿದ್ದಾರೆ ಎಂದು ತಿಳಿದುಬಂದಿದೆ.
ಮೃತರ ಸಾವಿನ ಹಿಂದೆ ಹಲವು ಅನುಮಾನಗಳು ಮೂಡಿದ್ದು, ಘಟನೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಇಂದು ಬೆಳಗ್ಗೆ ಕೆರೆಯಲ್ಲಿ ಶವಗಳು ಪತ್ತೆಯಾಗುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಪತ್ತೆಹಚ್ಚಲು ಹಾಗೂ ಸಾವಿನ ಕಾರಣ ತಿಳಿಯಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ತನಿಖೆಯ ಬಳಿಕ ಲಭ್ಯವಾಗಬೇಕಿದೆ.

