ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ವೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೌರ್ಜನ್ಯ ನಡೆಸಿದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪುರುಷೋತ್ತಮ್(43), ರಾಮಚಂದ್ರ(38) ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಸಂತ್ರಸ್ತ ಬಾಲಕನ ತಂದೆ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಮಾಹಿತಿ ನೀಡಿ, ಇಬ್ಬರು ಅಪ್ರಾಪ್ತರು ಒಂದೇ ಧರ್ಮಕ್ಕೆ ಸೇರಿದವರಾಗಿದ್ದು, ಘಟನೆ ಸಂಬಂಧ ಬಾಲಕನ ತಂದೆ ಠಾಣೆಗೆ ದೂರು ನೀಡಿದ್ದಾರೆ. ನನ್ನ ಮಗ ಮತ್ತು ಬಾಲಕಿಗೆ ಇಬ್ಬರು ಕಿರುಕುಳ ನೀಡಿದ್ದಾರೆ. ಬೇರೆ ಧರ್ಮದವರೆಂದು ಅನುಮಾನದಿಂದ ತೊಂದರೆ ನೀಡಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇವೆ ಎಂದು ತಿಳಿಸಿದ್ದಾರೆ.
ವಿಡಿಯೋ ಮಾಡಿ ಹರಿಬಿಟ್ಟಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಇಬ್ಬರು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
