ಬೆಂಗಳೂರು: ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್ ಪಡೆಯಲು ಒತ್ತಾಯ ಕೇಳಿ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹಸಚಿವ ಡಾ.ಜಿ. ಪರಮೇಶ್ವರ್, ಕಾನೂನು ವಿರುದ್ಧ ಕೆಲಸ ಮಾಡಿದವರ ಮೇಲೆ ಕ್ರಮ ಆಗುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಆಸ್ತಿ ನಷ್ಟ ಆಗದಿದ್ದರೆ ಸಂಪುಟ ಉಪ ಸಮಿತಿಯಲ್ಲಿ ಚರ್ಚಿಸಲಾಗುವುದು. ಅಪರಾಧ ಅಂಶಗಳು ಇಲ್ಲದಿದ್ದರೆ ಅಂತಹ ಕೇಸ್ ಗಳನ್ನು ವಾಪಸ್ ಪಡೆಯುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಅನೇಕ ಸಂದರ್ಭಗಳಲ್ಲಿ ಹಲವು ಪ್ರಕರಣ ವಾಪಸ್ ಪಡೆಯಲಾಗಿದೆ. ರೈತರು, ಕನ್ನಡಪರ ಹೋರಾಟಗಾರರ ಮೇಲಿನ ಕೇಸ್ ಗಳನ್ನು ಹಿಂಪಡೆಯಲಾಗಿದೆ. ಅದಕ್ಕೊಂದು ಪ್ರಕ್ರಿಯೆ ಇದೆ. ಅದರಂತೆ ಕ್ರಮ ಆಗುತ್ತದೆ. ಸಂಪುಟ ಉಪ ಸಮಿತಿ, ಸಂಪುಟ ಸಭೆಯಲ್ಲಿ ಚರ್ಚಿಸಿದ ಮೇಲೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
