ಮೈಸೂರು: ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆಯ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ಮೈಸೂರಿನ ಅರಮನೆ ಮೈದಾನದಲ್ಲಿ ಶುಭ ಕುಂಭ ಲಗ್ನದಲ್ಲಿ ಜಂಬೂಸವಾರಿಗೆ ಸಿಎಂ ಚಾಲನೆ ನೀಡಿದ್ದಾರೆ. ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂಸವಾರಿ ಮೆರವಣಿಗೆ ಸಾಗಲಿದೆ. ಲಕ್ಷಾಂತರ ಮಂದಿ ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯನ್ನು ಕಣ್ತುಂಬಿಕೊಂಡಿದ್ದಾರೆ.
ತಾಯಿ ಚಾಮುಂಡೇಶ್ವರಿ ವಿರಾಜಮಾನರಾಗಿರುವ 750 ಕೆಜಿ ಚಿನ್ನದ ಅಂಬಾರಿಯನ್ನು ಹೊತ್ತ ಅಭಿಮನ್ಯು ಆನೆ ಪುಷ್ಪಾರ್ಚನೆ ಸ್ಥಳಕ್ಕೆ ಆಗಮಿಸಿದ ವೇಳೆ ಸಿಎಂ ಸೇರಿದಂತೆ ಗಣ್ಯರು ಪುಷ್ಪಾರ್ಚನೆ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಡಾ.ಹೆಚ್.ಸಿ. ಮಹಾದೇವಪ್ಪ, ಸಂಸದ ಯದುವೀರ್ ಒಡೆಯರ್ ಸೇರಿದಂತೆ ಹಲವು ಗಣ್ಯರು ಪುಷ್ಪಾರ್ಚನೆ ಮಾಡಿದ್ದಾರೆ.
ಈ ಬಾರಿ ಜಂಬೂಸವಾರಿ ಮೆರವಣಿಗೆಯಲ್ಲಿ ವಿವಿಧ ಜಿಲ್ಲೆಗಳ ಆಕರ್ಷಕ 58 ಸ್ತಬ್ಧಚಿತ್ರಗಳು, 150ಕ್ಕೂ ಹೆಚ್ಚು ಕಲಾತಂಡಗಳು ಭಾಗಿಯಾಗಿದ್ದು, ಮೆರವಣಿಗೆಗೆ ಮೆರುಗು ತಂದಿವೆ.