ಬೆಂಗಳೂರು: ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ ಎಂದು ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ.
ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿ ಸೃಷ್ಟಿ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕೆ. ಮೋಹನ್ ಅವರನ್ನು ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪತ್ರ ಹರಿಬಿಟ್ಟು ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ||ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಮತ್ತು ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದೆ. ಈ ಬಗ್ಗೆ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು, ಪೊಲೀಸ್ ಇಲಾಖೆ ಇದರ ಹಿಂದಿರುವ ದುಷ್ಟರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಇಂತಹ ನಕಲಿ ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಜಾಲತಾಣ ಬಳಕೆದಾರರು ಎಚ್ಚರಿಕೆ ವಹಿಸಬೇಕು. ಈಗಿನ ಫೋಟೋಶಾಪ್ / ಎಐ ಯುಗದಲ್ಲಿ ವಾಟ್ಸ್ಆ್ಯಪ್ ಮಾಹಿತಿಗಳ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ಇತರರ ಜೊತೆ ಹಂಚಿಕೊಳ್ಳುವುದು ಕೂಡ ಅಪರಾಧವೆ ಆಗಿದೆ. ಸಕಾರಾತ್ಮಕ ಟೀಕೆಗೆ ನಾವು ಮುಕ್ತರಿದ್ದೇವೆ, ಸುಳ್ಳು ಸುದ್ದಿಗಳ ಅಪಪ್ರಚಾರವನ್ನು ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

