ಬೆಂಗಳೂರು : ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು (ಮಾರ್ಚ್ 05, 2026) ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ಬೃಹತ್ ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ, ಧಾರವಾಡ, ಹಾಸನ, ವಿಜಯಪುರ ಮತ್ತು ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಲಾಗಿದೆ.
ಭ್ರಷ್ಟಾಚಾರದ ಬೆನ್ನತ್ತಿ ಬಂದ ಲೋಕಾಯುಕ್ತ ಅಧಿಕಾರಿಗಳಿಗೆ ಹಾಸನದ ಎಇಇ ಎಂ.ಸಿ. ಸತ್ಯನಾರಾಯಣ ಅವರು ಬೆಳ್ಳಂಬೆಳಗ್ಗೆ ತಮ್ಮ ಮೊಂಡಾಟ ಪ್ರದರ್ಶಿಸಿದ್ದಾರೆ. ಅಧಿಕಾರಿಗಳು ಮನೆ ಬಾಗಿಲು ತಟ್ಟಿದರೂ, ಒಳಗಿದ್ದವರು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಾಗಿಲು ತೆರೆಯದೆ ಮೊಂಡಾಟ ಪ್ರದರ್ಶಿಸಿದರು. ಸಹೋದರಿ ಬಂದು ಬಾಗಿಲು ತಟ್ಟಿದ ಬಳಿಕ ಸತ್ಯನಾರಾಯಣ ಸುಮಾರು 2 ಗಂಟೆ ಬಳಿಕ ಬಾಗಿಲು ತೆರೆದರು.
ಲೋಕಾಯುಕ್ತ ಡಿವೈಎಸ್ಪಿ ನೇತೃತ್ವದ ತಂಡ ಮನೆ ಮುಂದೆ ಕಾದು ನಿಂತಿದ್ದರೂ, ಒಳಗಿನಿಂದ ಯಾವುದೇ ಪ್ರತಿಕ್ರಿಯೆ ನೀಡದ ಅಧಿಕಾರಿ ಸತ್ಯನಾರಾಯಣ್, ತನಿಖೆಗೆ ಅಡ್ಡಿಪಡಿಸುವ ಪ್ರಯತ್ನ ನಡೆಸಿದರು. ಕೊನೆಗೆ ಅಧಿಕಾರಿಗಳ ತೀವ್ರ ಎಚ್ಚರಿಕೆಯ ನಂತರ ಬಾಗಿಲು ತೆರೆಯಲಾಗಿದ್ದು, ಸದ್ಯ ದಾಖಲೆಗಳ ಜಾಲಾಡುವಿಕೆ ಮುಂದುವರಿದಿದೆ. ಮನೆಯೊಳಗೆ ಮಹತ್ವದ ದಾಖಲೆಗಳನ್ನು ನಾಶಪಡಿಸುವ ಉದ್ದೇಶದಿಂದಲೇ ಈ ಹೈಡ್ರಾಮಾ ನಡೆಸಲಾಯಿತೇ ಎಂಬ ಅನುಮಾನ ವ್ಯಕ್ತವಾಗಿದೆ.
ರಾಜ್ಯಾದ್ಯಂತ ಲೋಕಾಯುಕ್ತ ದಾಳಿ
ಅದೇ ರೀತಿ ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ, ಧಾರವಾಡ, ಹಾಸನ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ದಾಳಿ ಮಾಡಿರುವ ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಯಾದಗಿರಿಯಲ್ಲಿ ಎಲೆಕ್ಟ್ರಿಕಲ್ ಇಲಾಖೆ ಡೆಪ್ಯುಟಿ ಎಲೆಕ್ಟ್ರಿಕಲ್ ಇನ್ಸ್ಪೆಕ್ಟರ್ ವಿರೇಶ್ ಹಿರೇಮಠ್ ಅವರ ನಿವಾಸದ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ. ಧಾರವಾಡದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಎಂ.ಕೆ. ಸುರಕೋಡ ಅವರ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಡ್ಯದಲ್ಲಿ ಸಾರ್ವಜನಿಕ ಕಾಮಗಾರಿಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್. ಸತೀಶ್ ಅವರ ಮನೆ ಮತ್ತು ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.
ಹಾಸನ ಮಹಾನಗರ ಪಾಲಿಕೆಯ ಎಇಇ ಎಂ.ಸಿ. ಸತ್ಯನಾರಾಯಣ , ವಿಜಯಪುರದಲ್ಲಿ ಕೃಷ್ಣಭಾಗ್ಯ ಜಲ ನಿಗಮದ ಜೂನಿಯರ್ ಇಂಜಿನಿಯರ್ ಪ್ರಕಾಶ್ ಪಿ.ಜಿ. ಅವರ ಮನೆ ಹಾಗೂ ಮೈಸೂರಿನಲ್ಲಿ ಜಲಮಂಡಳಿಯ ಎಇಇ ಹಾಗೂ ಇಇ (ಇನ್ಚಾರ್ಜ್) ಆಶಿಫ್ ಇಕ್ಬಾಲ್ ಅವರ ನಿವಾಸದಲ್ಲಿ ಪರಿಶೀಲನೆ ನಡೆಯುತ್ತಿದೆ. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ್ ವಾಲಪ್ಪ ನಾಯಕ್ ಅವರ ನಿವಾಸದ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

