HomeLatest NewsBREAKING: ಡಿಸಿಎಂಗೇನೂ ಎಕ್ಸ್ ಟ್ರಾ ಕೊಂಬು, ಕೋಡು ಇರಲ್ಲ: ಡಿಕೆಶಿ ಹೇಳಿಕೆಗೆ HDK ತಿರುಗೇಟು

BREAKING: ಡಿಸಿಎಂಗೇನೂ ಎಕ್ಸ್ ಟ್ರಾ ಕೊಂಬು, ಕೋಡು ಇರಲ್ಲ: ಡಿಕೆಶಿ ಹೇಳಿಕೆಗೆ HDK ತಿರುಗೇಟು

ಬೆಂಗಳೂರು: ಹೆಚ್.ಡಿ. ಕುಮಾರಸ್ವಾಮಿಗಿಂತ ರಾಜಕೀಯದಲ್ಲಿ ನನಗೇ ಹೆಚ್ಚಿನ ಅನುಭವ ಇದೆ. ನಾನು ಮುಖ್ಯಮಂತ್ರಿ ಆಗದೆ ಇರಬಹುದು, ಆದರೆ ಆಡಳಿತ ವಿಚಾರದಲ್ಲಿ ಅವರಿಗಿಂತ ಅನುಭವ ಹೊಂದಿದ್ದೇನೆ. ಅವರಿಂದ ಕಲಿಯುವ ಅಗತ್ಯ ನನಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ನಡೆಸಿದ ಸಭೆಗೆ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಾನು ಬಹಳ ಕಾಲ ಸಚಿವನಾಗಿ ಕೆಲಸ ಮಾಡಿದ್ದೇನೆ. ಆಡಳಿತ ಹೇಗೆ ಮಾಡಬೇಕು, ಯಾರ ಜೊತೆ ಸಭೆ ನಡೆಸಬೇಕು, ನಡೆಸಬಾರದು ಎಂಬುದು ನನಗೆ ಚೆನ್ನಾಗಿ ಗೊತ್ತಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಹೆಚ್.ಡಿ. ಕುಮಾರಸ್ವಾಮಿ, ನಮ್ಮ ವಿಲೀನದ ಚಿಂತೆ ಪಕ್ಕಕ್ಕೆ ಇಡಿ. ನನ್ನ ಮತ್ತು ನಿಮ್ಮ ಆಡಳಿತಾನುಭವದ ಬಗ್ಗೆ ಮಾತನಾಡೋಣ. ನಾನು ಎರಡು ಸಣ್ಣ ಅವಧಿಗೆ ಮುಖ್ಯಮಂತ್ರಿ, ಅಲ್ಪ ಅವಧಿಗೆ ಪ್ರತಿಪಕ್ಷ ನಾಯಕ. ಈಗ ಕೇಂದ್ರ ಮಂತ್ರಿ.  ನೀವೂ ಸುದೀರ್ಘ ಅವಧಿಗೆ ಶಾಸಕ, ಅನೇಕ ಬಾರಿ ಮಂತ್ರಿ. ಈಗ ಮಂತ್ರಿ @ ಉಪ ಮುಖ್ಯಮಂತ್ರಿ! ನಮ್ಮಿಬ್ಬರ ಆಡಳಿತಾನುಭವದ ಬಗ್ಗೆ ನೀವು ಹೇಳುವುದಲ್ಲ, ಜನರನ್ನೇ ಕೇಳಬೇಕು ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಳ್ಳೆ, ಸುಲಿಗೆ, ಬೇಲಿ, ಚದರಡಿ, ಕಮಿಷನ್, ಫಿಕ್ಸಿಂಗ್, ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್ ಪೀರಿಯನ್ಸ್ ಅಲ್ಲಾ ಡಿಕೆಶಿರವರೇ.. ಏನೋ.. ಜನರ ಆಶೀರ್ವಾದ ಮತ್ತು ದೇವರ ದಯೆಯಿಂದ ಸಿಕ್ಕಿದ ಅವಕಾಶದಲ್ಲಿ ಜನರಿಗೆ ಕೈಲಾದ ಸಹಾಯ ಮಾಡುವ ಹುಲು ರಾಜಕಾರಣಿ ನಾನಷ್ಟೇ. ನಿಮಗೆ ಸಿದ್ಧಿಸಿರುವ ಅಂತಹ ಭಾರೀ ಅನುಭವ ನನಗಿಲ್ಲ.. ವಿನಮ್ರವಾಗಿ ಒಪ್ಪಿಕೊಳ್ಳುವೆ. ನಿಮಗೆ ಭೂ ಕಬ್ಜ, ಒತ್ತುವರಿ ಕರತಲಾಮಲಕ. ಅದೇ ರೀತಿ ಮತ್ತೊಬ್ಬ ಸಚಿವರ ಖಾತೆಯನ್ನು ಒತ್ತುವರಿ ಮಾಡುವುದರಲ್ಲಿಯೂ ನೀವು ನಿಸ್ಸೀಮರು. ಅದನ್ನಷ್ಟೇ ನಾನು ಹೇಳಿದ್ದು ಎಂದು ತಿಳಿಸಿದ್ದಾರೆ.

ತಾವು ಡಿಸಿಎಂ ಆಗಿರಬಹುದು. ಆದರೆ ಮಂತ್ರಿ ಪದವಿಗೆ ಇರುವಷ್ಟೇ ಶಿಷ್ಟಾಚಾರ, ಅಧಿಕಾರ ವ್ಯಾಪ್ತಿ ಆ ಹುದ್ದೆಗಿದೆ ಎನ್ನುವುದು ಗೊತ್ತಿಲ್ಲವೇ? ಅದಕ್ಕೇನು ಎಕ್ಸ್’ಟ್ರಾ ಕೊಂಬು, ಕೋಡು ಇರಲ್ಲ. ಇರಲಿ ಎಂದು ತಾವು ಸಿಕ್ಕಿಸಿಕೊಳ್ಳೋದಕ್ಕೂ ಬರಲ್ಲ. ನಿಮ್ಮ ಎಕ್ಸ್’ಪೀರಿಯನ್ಸ್ ಗೆ ಈ ಸಣ್ಣ ವಿಷಯವೂ ತಟ್ಟಲಿಲ್ಲವೇ ಮಿಸ್ಟರ್ ಡಿಕೆಶಿ ಅವರೇ!!??

ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆಯನ್ನು ಗೃಹ ಸಚಿವರೇ ನಡೆಸಬೇಕಿತ್ತು. ಅದು ಅವರ ಅಧಿಕಾರ ವ್ಯಾಪ್ತಿ. ಅವರು ಬಿಟ್ಟರೆ ಮುಖ್ಯಮಂತ್ರಿಗಳು ಅಂಥ ಸಭೆ ನಡೆಸಬಹುದು. ನೀವು ಸಭೆ ನಡೆಸಿದ್ದು ಶಿಷ್ಟಾಚಾರ, ಅಧಿಕಾರದ ಸ್ಪಷ್ಟ ಉಲ್ಲಂಘನೆ. ಇದನ್ನು ಆಡಳಿತಾನುಭವ, ಸೀನಿಯಾರಿಟಿ ಎಂದು ಬೆನ್ನು ತಟ್ಟಿಕೊಳ್ಳುತ್ತೀರಾ?

ಹೋಗಲಿ, ನೀವು ಮೀಟಿಂಗ್ ಮಾಡಿ ಎಂದು ಗೃಹ ಸಚಿವರು, ಸಿಎಂ ಅವರು ಹೇಳಿದ್ದರಾ? ಇಲ್ಲವಲ್ಲ. ಅದಕ್ಕೇ ನಾನು ಹೇಳಿದ್ದು; ಅವರೇನು ಹೆಬ್ಬೆಟ್ಟು ಗೃಹ ಮಂತ್ರಿಗಳಾ? ಅಥವಾ ರಬ್ಬರ್ ಸ್ಟ್ಯಾಂಪ್ ಗೃಹ ಮಂತ್ರಿಗಳಾ? ಎಂದು. ಒಬ್ಬ ಹಿರಿಯ ಮಂತ್ರಿಯ ಖಾತೆಯನ್ನು ನೀವು ಹೀಗೆ ಅಕ್ರಮವಾಗಿ ಒತ್ತುವರಿ ಮಾಡುವುದಕ್ಕೆ ಸಂವಿಧಾನದಲ್ಲಿ ವಿಶೇಷ ತಿದ್ದುಪಡಿ ಏನನ್ನಾದರೂ ಮಾಡಿಸಿದ್ದೀರ? ನಿಮ್ಮದು ಭಾರೀ ಅನುಭವ, ಸಿಕ್ಕಾಪಟ್ಟೆ ಸೀನಿಯಾರಿಟಿ!! ಇಂಥ ಸಣ್ಣ ವಿಷಯ ನಿಮಗೇಕೆ ತಿಳಿಯಲಿಲ್ಲ ಮಿಸ್ಟರ್ ಡಿಕೆಶಿ ಅವರೇ? ಎಂದು ವ್ಯಂಗ್ಯವಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular