ಬೆಂಗಳೂರು/ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರ್ಕಾರ ರಚನೆ ಕಸರತ್ತು ಗರಿಗೆದರಿದೆ. ಇಂದು ಹೈಕಮಾಂಡ್ ನಾಯಕರ ಜೊತೆಗೆ ಡಿ.ಕೆ. ಶಿವಕುಮಾರ್ ಚರ್ಚೆ ನಡೆಸಲಿದ್ದಾರೆ.
ಸಿ.ಎಲ್.ಪಿ. ಸಭೆ ಕುರಿತಾಗಿ, ಎಷ್ಟು ಸಚಿವರ ಜೊತೆಗೆ ಪ್ರಮಾಣವಚನ ಸ್ವೀಕರಿಸಬೇಕೆಂಬುದರ ಬಗ್ಗೆ ಹೈಕಮಾಂಡ್ ನಾಯಕರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ.
ರಾಜೀನಾಮೆ ಅಂಗೀಕಾರ
ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಗುರುವಾರ ಸಂಜೆ ಬೆಂಗಳೂರಿಗೆ ಹಿಂದಿರುಗಿದ ನಂತರ ರಾಜ್ಯಪಾಲರು ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ಪಕ್ಷದ ಹೈಕಮಾಂಡ್ ರಾಜೀನಾಮೆ ನೀಡುವಂತೆ ಕೇಳಿದ ಎರಡು ದಿನಗಳ ನಂತರ, ಗುರುವಾರ ಮಧ್ಯಾಹ್ನ ಬೆಂಗಳೂರಿನ ಲೋಕಭವನದಲ್ಲಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಸಿದ್ದರಾಮಯ್ಯ ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅನುಪಸ್ಥಿತಿಯಲ್ಲಿ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರು ರಾಜೀನಾಮೆಯನ್ನು ಸ್ವೀಕರಿಸಿದರು. ಇದು ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ದಾರಿ ಮಾಡಿಕೊಟ್ಟಿತು.
ಜೂನ್ 1 ಅಥವಾ 3 ರಂದು ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಸಾಧ್ಯತೆ
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜೂನ್ 1 ಅಥವಾ ಜೂನ್ 3 ರಂದು ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.
ಸಿದ್ದರಾಮಯ್ಯ ತಮ್ಮ ಉತ್ತರಾಧಿಕಾರಿಯಾಗಲು ಉಪ ಮುಖ್ಯಮಂತ್ರಿಯನ್ನು ಬೆಂಬಲಿಸಿದ್ದಾರೆ ಮತ್ತು ಎಲ್ಲರೂ ತಮ್ಮನ್ನು ಬೆಂಬಲಿಸುವಂತೆ ಕೇಳಿಕೊಂಡಿದ್ದಾರೆ. ತಮ್ಮ ಸಂಪುಟ ಸಹೋದ್ಯೋಗಿಗಳು ಮತ್ತು ಶಾಸಕರೊಂದಿಗಿನ ಸಭೆಯಲ್ಲಿ ಅವರು ಈ ಘೋಷಣೆ ಮಾಡಿದ್ದರು. ದೆಹಲಿಯಲ್ಲಿ ಸಿದ್ಧರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಚರ್ಚಿಸಲಿದ್ದು, ಸಿ.ಎಲ್.ಪಿ. ಸಭೆ, ಶಾಸಕಾಂಗ ನಾಯಕನ ಆಯ್ಕೆ, ಸಂಪುಟ ರಚನೆ ಕುರಿತಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

