ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಹೆಚ್.ಡಿ. ದೇವೇಗೌಡರು, ರಾಜ್ಯಾಧ್ಯಕ್ಷರಾಗಿ ಹೆಚ್.ಡಿ. ಕುಮಾರಸ್ವಾಮಿ ಮುಂದುವರೆಯಲಿದ್ದಾರೆ.
ಜೆಡಿಎಸ್ ಪಕ್ಷ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜೆಪಿ ಭವನದಲ್ಲಿ ನಡೆದ ರಜತ ಮಹೋತ್ಸವ, ರಾಷ್ಟ್ರೀಯ ಸಮಾವೇಶ ನಡೆಸಲಾಗಿದೆ. ಇದೇ ವೇಳೆ ನಡೆದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.
ಕಾರ್ಯಕಾರಿಣಿ ಸಭೆಯ ಬಳಿಕ ಪಕ್ಷದ ಜೆ.ಡಿ.ಎಲ್.ಪಿ. ನಾಯಕ ಸುರೇಶ್ ಬಾಬು ಈ ಕುರಿತಾಗಿ ಮಾಹಿತಿ ನೀಡಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಹೆಚ್.ಡಿ. ಕುಮಾರಸ್ವಾಮಿ ಮುಂದುವರೆಯಲಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರಾಗಿ ಹೆಚ್.ಡಿ. ದೇವೇಗೌಡರನ್ನು ಆಯ್ಕೆ ಮಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಪಕ್ಷ ಸಂಘಟನೆ ಮಾಡಲಾಗುವುದು. ಜಿಲ್ಲಾಧ್ಯಕ್ಷರನ್ನು ಬದಲಾವಣೆ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಪಕ್ಷ ಸಂಘಟನೆ ನಿಟ್ಟಿನಲ್ಲಿ ಒಂದಷ್ಟು ಬದಲಾವಣೆ ಮಾಡಲಾಗುವುದು ಎಂದು ಸುರೇಶ್ ಬಾಬು ಹೇಳಿದ್ದಾರೆ.
