ಬೆಂಗಳೂರು: ರಾಜ್ಯದ ವಿವಿಧೆಡೆ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ನಾಳೆ ಶಾಲೆಗಳಿಗೆ ರಜೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಗಾಳಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಜುಲೈ 25ರಂದು ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 25ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪೋಷಕರು ಜಾಗ್ರತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವೆಂಕಟರಾಜಾ ಅವರು ಜು. 25ರಂದು ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಕೊಡಗು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ.