ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ.
ಮಾಹಿತಿ ಸಂಗ್ರಹ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಟಿ.ಡಿ. ರಾಜೇಗೌಡ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಕೋರ್ಟ್ ನಿರ್ದೇಶನದಂತೆ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ.
ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜೇಗೌಡ ವಿಧಾನಸಭೆ ಚುನಾವಣೆ ಅಫಿಡವಿಟ್ ನಲ್ಲಿ ಆಸ್ತಿ ಘೋಷಣೆ ಮಾಡದ ಬಗ್ಗೆ ಅವರ ದೂರು ದಾಖಲಾಗಿತ್ತು. ಶಾಸಕರಾಗಿ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಜನಪ್ರತಿನಿಧಿಗಳ ಕೋರ್ಟ್ ಗೆ ಬಿಜೆಪಿ ಮುಖಂಡ ದಿನೇಶ್ ಹೊಸೂರು ದೂರು ನೀಡಿದ್ದರು.
ಜನಪ್ರತಿನಿಧಿಗಳ ನ್ಯಾಯಾಲಯದ ಸೂಚನೆ ಮೇರೆಗೆ ಪ್ರಕರಣ ದಾಖಲಾಗಿದೆ. ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಬಸಾಪುರ ಗ್ರಾಮದಲ್ಲಿರುವ ರಾಜೇಗೌಡರ ನಿವಾಸದಲ್ಲಿ ಪರಿಶೀಲನೆ ನಡೆಸಲಾಗಿದೆ. ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಶಾಸಕ ರಾಜೇಗೌಡ ಹೇಳಿದ್ದಾರೆ.