ಬೆಂಗಳೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಒಳ ಮೀಸಲಾತಿಯನ್ನು ಮೂರು ಗುಂಪುಗಳಾಗಿ ವಿಂಗಡಿಸಲು ತೀರ್ಮಾನಿಸಲಾಗಿದೆ. ಎಡ ಸಮುದಾಯಕ್ಕೆ ಶೇಕಡ 6, ಬಲ ಸಮುದಾಯಕ್ಕೆ ಶೇಕಡ 6, ಇತರೆ ಸ್ಪೃಶ್ಯ ಸಮುದಾಯಕ್ಕೆ ಶೇಕಡ 5ರಷ್ಟು ಮೀಸಲಾತಿ ನೀಡಲು ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಎಡಗೈ ಸಮುದಾಯ 18 ಜಾತಿಗಳು ಶೇಕಡ 6ರಷ್ಟು ಮೀಸಲಾತಿ, ಬಲಗೈ ಸಮುದಾಯ 20 ಜಾತಿಗಳು ಶೇಕಡ 6ರಷ್ಟು ಮೀಸಲಾತಿ, ಇತರೆ ಸ್ಪೃಶ್ಯ ಜಾತಿಗಳು 63 ಶೇಕಡ 5ರಷ್ಟು ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.
ನ್ಯಾಯಮೂರ್ತಿ ನಾಗಮೋಹನದಾಸ್ ವರದಿಯಲ್ಲಿ 5 ಗುಂಪುಗಳಾಗಿ ವಿಂಗಡಿಸಲಾಗಿತ್ತು. ದಲಿತ ಸಮುದಾಯಕ್ಕೆ ಒಳ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮೂರು ಗುಂಪುಗಳಾಗಿ ವರ್ಗೀಕರಣ ಮಾಡಿದೆ. ಎಡಗೈ ಸಮುದಾಯಕ್ಕೆ 6, ಬಲಗೈ ಸಮುದಾಯಕ್ಕೆ 6, ಸ್ಪೃಶ್ಯ ಸಮುದಾಯಕ್ಕೆ 5ರಷ್ಟು ಮೀಸಲಾತಿ ಅಂತಿಮಗೊಳಿಸುವ ಸಾಧ್ಯತೆ ಇದೆ.
ನಾಳೆ ಸದನದಲ್ಲಿ ಸಿಎಂ ಸಿದ್ಧರಾಮಯ್ಯ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನದ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಹೇಳಲಾಗಿದೆ.