ಮಂಗಳೂರು: ಮಂಗಳೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ಕರೆ ನೀಡಲಾಗಿದೆ.
ಮೇ 1 ರಂದು ರಾತ್ರಿ 8:27 ರ ಸುಮಾರಿಗೆ ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಕಿನ್ನಿಪದವು ಕ್ರಾಸ್ ಬಳಿ ಸುಹಾಸ್ ಶೆಟ್ಟಿ ಕೊಲೆ ಮಾಡಲಾಗಿದೆ. ಸಂಜಯ್, ಪ್ರಜ್ವಲ್, ಅನ್ವಿತ್, ಲತೀಶ್ ಮತ್ತು ಶಶಾಂಕ್ ಅವರೊಂದಿಗೆ ವಾಹನದಲ್ಲಿ(KA-12-MB-3731) ಪ್ರಯಾಣಿಸುತ್ತಿದ್ದ ಸುಹಾಶ್ ಶೆಟ್ಟಿಯನ್ನು ಸ್ವಿಫ್ಟ್ ಕಾರು ಮತ್ತು ಪಿಕಪ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ ದುಷ್ಕರ್ಮಿಗಳ ಗುಂಪು ತಡೆದಿದೆ. 5 ರಿಂದ 6 ಜನರಿದ್ದ ದುಷ್ಕರ್ಮಿಗಳು ಸುಹಾಶ್ ಶೆಟ್ಟಿ ಮೇಲೆ ಮಾರಕ ಆಯುಧಗಳಿಂದ ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿದ್ದಾರೆ. ಅವರನ್ನು ತಕ್ಷಣ ಎಜೆ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಸಾವನ್ನಪ್ಪಿದ್ದಾರೆ.
ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಲು ಹಲವಾರು ತಂಡಗಳನ್ನು ರಚಿಸಲಾಗಿದೆ.
ನಿಷೇಧಾಜ್ಞೆ ಜಾರಿ
ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಂದ್ ಕರೆ ನೀಡಲಾಗಿದೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬಿಎನ್ಎಸ್ ಕಲಂ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಇಂದಿನಿಂದ ಮೇ 6ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಆದೇಶ ಹೊರಡಿಸಿದ್ದಾರೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತಾಲಯವು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ(ಬಿಎನ್‌ಎಸ್), 2023 ರ ಸೆಕ್ಷನ್ 163 ರ ಅಡಿಯಲ್ಲಿ ತ್ವರಿತವಾಗಿ ನಿಷೇಧಾಜ್ಞೆಗಳನ್ನು ವಿಧಿಸಿದೆ. ಈ ಆದೇಶವು ಇಂದು, ಮೇ 2, 2025 ರಂದು ಬೆಳಿಗ್ಗೆ 6 ಗಂಟೆಗೆ ಜಾರಿಗೆ ಬಂದಿದ್ದು, ಮೇ 6, 2025 ರಂದು ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.