ಮಂಡ್ಯ : ಮಂಡ್ಯದ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆಸಲಾಗಿದ್ದು, ಸದ್ಯ ಮದ್ದೂರಿನಲ್ಲಿ ಘಟನೆ ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.
ಮದ್ದೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಭುಗಿಲೆದ್ದಿದ್ದು, ಘಟನೆ ಖಂಡಿಸಿ ಪ್ರತಿಭಟನಾಕಾರರು ಕಲ್ಲ ತೂರಿದ್ದಾರೆ. ಈ ವೇಳೆ ಪೊಲೀಸರು ಲಾಠಿ ಬೀಸಿದ್ದಾರೆ. ಪೊಲೀಸರಿಂದ ತಪ್ಪಿಸಿಕೊಂಡು ಓಡುವಾಗ ಬಿದ್ದು ಹಲವರು ಮಹಿಳೆಯರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದ್ದ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪರಿಸ್ಥಿತಿ ತಿಳಿಗೊಳಿಸಿದ್ದು, ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಾಳೆ ಬೆಳಗ್ಗೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ರೂಟ್ ಮಾರ್ಚ್ ನಡೆಸಲಾಗಿದೆ. ಮದ್ದೂರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದ್ದಾರೆ.ತಮಿಳು ಕಾಲೋನಿ ಯುವಕರು ಗಣೇಶ ಪ್ರತಿಷ್ಠಾಪನೆ ಮಾಡಿದ್ದರು. ನಿನ್ನೆ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲುತೂರಾಟವಾಗಿದೆ ಎಂದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.
ರಾಮರಹಿಮ್ ನಗರದಲ್ಲಿ ಮೆರವಣಿಗೆಯ ವೇಳೆ ಕಲ್ಲು ತೂರಾಟ ನಡೆದಿದೆ. ಲೈಟ್ ಆಫ್ ಮಾಡಿ ಕಲ್ಲು ತೂರಾಟ ಮಾಡಿದ್ದಾರೆ ಎನ್ನುವ ಆರೋಪವಿದೆ. ಘಟನೆ ಸಂಭಂದ 2 ಕೇಸು ದಾಖಲಿಸಲಾಗಿದೆ. 21 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರು ಮಾತ್ರ ಚನ್ನಪಟ್ಟಣದವರು. ಉಳಿದವರು ಸ್ಥಳೀಯರು. ನಾಳೆ ಬೆಳಗ್ಗೆವರೆಗೆ ಮದ್ದೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕಲ್ಲು ತೂರಾಟದ ವೇಳೆ ಮೂವರು ಯುವಕರಿಗೆ ಪೆಟ್ಟು ಬಿದ್ದಿದೆ. ಇಬ್ಬರು ಪೊಲೀಸ್ ಸಿಬ್ಬಂದಿಗೆ ಏಟು ಬಿದ್ದಿದೆ ಎಂದು ಮದ್ದೂರಿನಲ್ಲಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿದ್ದಾರೆ.