BREAKING: ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ

ಬೆಂಗಳೂರು: ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೊಟೀಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿ.ಎಸ್‌.ಟಿ. ನೊಟೀಸ್ ವಿಷಯಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿ, ಬಳಿಕ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ವ್ಯಾಪಾರಿಗಳನ್ನು ಪ್ರತಿನಿಧಿಸುವ ಹಲವು ಸಂಘಟನೆಗಳ ಪ್ರತಿನಿಧಿಗಳು ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ. ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು. ಯಾರಿಗಾದರೂ ನಿಯಮಬಾಹಿರವಾಗಿ ಹಳೆಯ ತೆರಿಗೆ ಬಾಕಿಗಾಗಿ ನೀಡಿದ್ದರೆ ಆ ಹಳೆ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿ.ಎಸ್.ಟಿ. ನೋಂದಣಿ ಮಾಡಬೇಕು ಎಂದು ಹೇಳಿದ್ದಾರೆ.

ಸಣ್ಣ ವ್ಯಾಪಾರಿಗಳಲ್ಲಿ ಜಿ.ಎಸ್‌.ಟಿ. ನೊಟೀಸ್ ಕುರಿತು ಗೊಂದಲ ಇದೆ. ಸಾಲದ ಮೊತ್ತ ಕೂಡಾ ಇದರಲ್ಲಿ ಸೇರಿಕೊಂಡಿದೆ. ವೈಯಕ್ತಿಕ ವಹಿವಾಟು ಹಣ ಸಹ ಇದರಲ್ಲಿ ಸೇರಿದೆ. ಜಿ.ಎಸ್‌.ಟಿ.ಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿ.ಎಸ್‌.ಟಿ. ಕೌನ್ಸಿಲ್ ನಿರ್ಧರಿಸುತ್ತದೆ. ಇದಕ್ಕೆ ಸಂಬಂಧಿಸಿದ ಎಲ್ಲ ನೀತಿ-ನಿಯಮಾವಳಿಗಳನ್ನು ಕೇಂದ್ರ ಸರ್ಕಾರವೇ ರಚಿಸಿದೆ. ಅವುಗಳ ಪಾಲನೆ ಮಾಡುವುದಷ್ಟೇ ರಾಜ್ಯ ಸರ್ಕಾರಗಳ ಕರ್ತವ್ಯವಾಗಿದೆ. ಈ ನೀತಿ-ನಿಯಮಾವಳಿಗಳ ರಚನೆಯಲ್ಲಿ ರಾಜ್ಯಗಳ ಪಾತ್ರ ಇಲ್ಲ ಎಂದು ಹೇಳಿದ್ದಾರೆ.

 ರಾಜ್ಯ ಸರ್ಕಾರ ಸಂಗ್ರಹಿಸುವ ಜಿ.ಎಸ್.ಟಿ.ಯಲ್ಲಿ ಶೇಕಡ 50ರಷ್ಟು ಮೊತ್ತ ಮಾತ್ರ ರಾಜ್ಯಕ್ಕೆ ನೀಡಲಾಗುತ್ತದೆ. ಕರ್ನಾಟಕ ಸರ್ಕಾರ ತೆರಿಗೆ ಸಂಗ್ರಹವನ್ನು ಉತ್ತಮ ರೀತಿಯಲ್ಲಿ ಮಾಡುತ್ತಿದೆ. ಜಿ.ಎಸ್.ಟಿ. ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಜಿಎಸ್‌ಟಿ ನೊಟೀಸ್ ಗಳನ್ನು ನಿಯಮಾನುಸಾರವಾಗಿಯೇ ನೀಡಲಾಗಿದೆ. ಆದರೆ ವ್ಯಾಪಾರಿಗಳಿಗೆ ಪರಿಹಾರ ತೆರಿಗೆ ಪಾವತಿಸಲು ಅವಕಾಶ ನೀಡಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡದೆ, ವ್ಯಾಪಾರಿಗಳು ನೇರವಾಗಿ ಇಲಾಖೆ ಸಂಪರ್ಕಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಕೆಲವು ಪ್ರತಿನಿಧಿಗಳು ಮನವಿ ಮಾಡಿದ್ದಾರೆ ಎಂದರು.

ಸಣ್ಣ ವ್ಯಾಪಾರಿಗಳಿಗೆ ನೆರವಾಗುವಂತೆ ಸಹಾಯವಾಣಿ ಆರಂಭಿಸಬೇಕು. ಜಿ.ಎಸ್‌.ಟಿ. ಕುರಿತು ಸರಿಯಾಗಿ ಮಾಹಿತಿ ಇಲ್ಲದ ಕಾರಣ ಗೊಂದಲ ಉಂಟಾಗಿದೆ. ಜಾಗೃತಿ ಕಾರ್ಯಕ್ರಮ ಕೈಗೊಳ್ಳಬೇಕು. ಒಂದು ಬಾರಿಗೆ ಹಳೆಯ ಬಾಕಿಯನ್ನು ಮನ್ನಾ ಮಾಡಬೇಕು ಎಂದು ಮನವಿ ಸಲ್ಲಿಸಿದ್ದಾರೆ. ಯುಪಿಐ ಅಡಿ ರೂ. 40 ಲಕ್ಷಕ್ಕೂ ಅಧಿಕ ವಹಿವಾಟು ಮಾಡಿರುವವರಿಗೆ ಮಾತ್ರ ಜಿಎಸ್‌ಟಿ ನೊಟೀಸ್ ನೀಡಲಾಗಿದೆ. ಆರಂಭದಲ್ಲಿ ಜಿಎಸ್ಟಿ ನೊಂದಣಿ ಮಾಡುವಂತೆ ನೋಟಿಸ್ ನೀಡಲಾಗಿತ್ತು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕೇವಲ 9 ಸಾವಿರ ವ್ಯಾಪಾರಿಗಳಿಗೆ ಕಳೆದ 2-3 ವರ್ಷಗಳ ಅವಧಿಗೆ ಸಂಬಂಧಿಸಿದಂತೆ 18 ಸಾವಿರ ನೊಟೀಸ್ ಜಾರಿಗೊಳಿಸಲಾಗಿದೆ. ವ್ಯಾಪಾರ ವಹಿವಾಟುಗಳನ್ನು ನಡೆಸಲು ಕಾನೂನುಬದ್ಧವಾಗಿ ಸರ್ಕಾರ ಎಲ್ಲಾ ನೆರವು ನೀಡಲಿದೆ. ತೆರಿಗೆ ಸರಿಯಾಗಿ ಪಾವತಿಸಲು ಸಹಕಾರ ನೀಡಲಿದೆ. ವ್ಯಾಪಾರಿಗಳಿಗೆ ತೊಂದರೆ ನೀಡಬೇಕೆಂಬುವುದು ಸರ್ಕಾರದ ಉದ್ದೇಶವಲ್ಲ. ಸರ್ಕಾರ ಸಣ್ಣ ವ್ಯಾಪಾರಿಗಳ ಪರವಾಗಿದೆ. ಸರ್ಕಾರ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಿದ್ದು, ಯಾರಿಗೂ ತೊಂದರೆಯಾಗದಂತೆ ಖಾತ್ರಿಪಡಿಸಲಾಗುವುದು. ವ್ಯಾಪಾರಿಗಳಿಗೆ ನೆರವು ನೀಡಲು ಈಗಲೇ ಸಹಾಯವಾಣಿ ಇದ್ದು, ಇದನ್ನು ಇನ್ನಷ್ಟು ಪರಿಣಾಮಕಾರಿ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ವ್ಯಾಪಾರ ವಹಿವಾಟು ಬಂದ್‌ಗೆ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ ಎಂದು ಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ. ಈ ಕುರಿತಾಗಿ ನಡೆಸಲು ನಿರ್ಧರಿಸಿದ್ದ ಎಲ್ಲಾ ರೀತಿಯ ಪ್ರತಿಭಟನೆಗಳನ್ನು ಕೈಬಿಡಲಾಗುವುದು ಎಂದು ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಿಳಿಸಿದ್ದಾರೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read