ಹಾಸನ: ಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧೀಕ್ಷಕನಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಪ್ರಧಾನ ಜಿಲ್ಲಾ ಸತ್ರ ಮತ್ತು ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.
ಗೋವಿಂದರಾಜು ಶಿಕ್ಷೆಗೆ ಒಳಗಾದವರು. ಚನ್ನರಾಯಪಟ್ಟಣ ಸಮಾಜ ಕಲ್ಯಾಣ ಇಲಾಖೆ ಕಚೇರಿ ಅಧೀಕ್ಷಕರಾಗಿದ್ದ ಗೋವಿಂದರಾಜು ಮತ್ತು ಕುಮಾರ್ ಗೌಡ ಅವರು ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿ ಬಿದ್ದಿದ್ದರು. 2011ರ ಜುಲೈ 28ರಂದು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ತನಿಖಾಧಿಕಾರಿಗಳು ತನಿಖೆ ನಡೆಸಿ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ತನಿಖಾಧಿಕಾರಿಗಳಾಗಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಶಿವಬಸಪ್ಪ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಧಾನ ಜಿಲ್ಲಾ ಸತ್ರ ಮತ್ತು ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಗೋವಿಂದರಾಜು ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಒಂದೂವರೆ ವರ್ಷ ಸಾದಾ ಶಿಕ್ಷೆ ಮತ್ತು ಐವತ್ತು ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ 5 ತಿಂಗಳು ಸಾದಾ ಶಿಕ್ಷೆ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.
ಪ್ರಕರಣದ ಎರಡನೇ ಆರೋಪಿ ಕುಮಾರ್ ಗೌಡ ವಿರುದ್ಧ ಆರೋಪ ಸಾಬೀತಾಗದ ಕಾರಣ ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ.

