ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ನಿಯೋಜಿತರಾಗಿದ್ದ ಅಧಿಕಾರಿ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.
ದಾವಣಗೆರೆ ಮಹಾನಗರ ಪಾಲಿಕೆಯ ಸಹಾಯಕ ಕಂದಾಯ ಅಧಿಕಾರಿ ಬಿ. ವಿನಾಯಕ ಅವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಗುರುವಾರ ಆದೇಶ ಹೊರಡಿಸಿದ್ದಾರೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ ಕರ್ತವ್ಯಕ್ಕೆ ನಿಯೋಜಿತರಾದ ಅಧಿಕಾರಿಗಳಿಗೆ ವಾಹನಗಳ ಹಂಚಿಕೆ ಮಾಡುವ ಜವಾಬ್ದಾರಿಯನ್ನು ವಿನಾಯಕ ಅವರಿಗೆ ವಹಿಸಲಾಗಿತ್ತು. 70 ವಾಹನಗಳನ್ನು ಚುನಾವಣಾ ಕರ್ತವ್ಯಕ್ಕೆ ಹಂಚಿಕೆ ಮಾಡಿರುವುದಾಗಿ ಹೆಚ್ಚುವರಿ ಜಿಲ್ಲಾಧಿಕಾರಿಗೆ ಅವರು ಮಾಹಿತಿ ನೀಡಿದ್ದರು. ಆದರೆ ಸೆಕ್ಟರ್ ಅಧಿಕಾರಿಗಳಿಗೆ ವಾಹನ ಏಕೆ ಹಂಚಿಕೆ ಮಾಡಿಲ್ಲ ಎಂಬುದಕ್ಕೆ ಉತ್ತರಿಸಲು ವಿಫಲರಾದ ಕಾರಣ ನೋಟಿಸ್ ನೀಡಲಾಗಿತ್ತು.
ನೋಟಿಸ್ ಗೆ ವಿನಾಯಕ ಉತ್ತರ ನೀಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಇಲಾಖಾ ವಿಚಾರಣೆ ಕಾಯ್ದಿರಿಸಿ ಕರ್ತವ್ಯ ಲೋಕದ ಕಾರಣಕ್ಕೆ ಸೇವೆಯಿಂದ ಅಮಾನತು ಮಾಡಲಾಗಿದೆ.

