ದಾವಣಗೆರೆ: ಉಪಚುನಾವಣ ಆಖಾಡ ದಿನದಿಂದ ದಿನಕ್ಕೆ ಕಾವೇರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದ್ದು, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿರುವುದಕ್ಕೆ ಅಲ್ಪಸಂಖ್ಯಾತ ಮುಸ್ಲಿಂ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಸಾದಿಕ್ ಪೈಲ್ವಾನ್ ಕಾಂಗ್ರೆಸ್ ವಿರುದ್ಧ ಬಂಡಾಯ ಸಾರಿದ್ದು, ಬಂಡಾಯ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸುವುದಾಗಿ ಸವಾಲು ಹಾಕಿದ್ದಾರೆ. ಇದರಿಂದಾಗಿ ಮುಸ್ಲಿಂ ಮುಖಂಡರ ಮನವೊಲಿಕೆ ಕಾಂಗ್ರೆಸ್ ನಾಯಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಸಮರ್ಥ್ ಶಾಮನೂರು ಅವರುಗೆ ಟಿಕೆಟ್ ನೀಡಿರುವುದು ಕಾಂಗ್ರೆಸ್ನಲ್ಲಿ ಭಾರಿ ಗೊಂದಲಕ್ಕೆ ಕಾರಣವಾಗಿದ್ದರೆ, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಹೆಚ್ಚಿನ ಬೆಂಬಲ ದೊರೆಯುವುದಕ್ಕೂ ಕಾರಣವಾಗುತ್ತಿದೆ. ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಟಿಕೆಟ್ ಸಿಗದೇ ಇರುವುದರಿಂದ ಅಸಮಾಧಾನಗೊಂಡಿರುವ 12ನೇ ವಾರ್ಡ್‌ನ ಯುವಕರು, ಕಾಂಗ್ರೆಸ್ ಮುಖಂಡ ಶಫೀಕ್ ಪಂಡಿತ್ ಅವರ ಬೆಂಬಲಿಗರು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಬಹಿರಂಗವಾಗಿ ಬೆಂಬಲ ಘೋಷಿಸಿದ್ದಾರೆ.
ಈ ಬೆಳವಣಿಗೆ ನಡುವೆಯೇ 20ಕ್ಕೂ ಹೆಚ್ಚು ಮುಸ್ಲಿಮರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ನಾಯಕರಿಗೆ ಮುಸ್ಲಿಂ ಮುಖಂಡರ ಒಲೈಕೆ ದೊಡ್ದ ತಲೆನೋವಾಗಿ ಪರಿಣಮಿಸಿದೆ.

