ಬೆಂಗಳೂರು: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ವಿಪಕ್ಷ ಬಿಜೆಪಿ ಅಭ್ಯರ್ಥಿಗಳು ಸೋಲನುಭವಿಸಿದ್ದು, ಎರಡೂ ಕ್ಷೇತ್ರಗಳಲ್ಲಿಯೂ ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಜಯಗಳಿಸಿದ್ದಾರೆ.
ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಉಪಚುನಾವಣೆಯಲ್ಲಿ ಹಿನ್ನಡೆಯಾಗಿದ್ದಕ್ಕೆ ಪರಾಮರ್ಶೆ ನಡೆಸುತ್ತೇವೆ ಎಂದಿದ್ದಾರೆ.
ದಾವನಗೆರೆ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಬಾಗಲಕೋಟೆಯಲ್ಲಿ ಆಗಿರುವ ಹಿನ್ನಡೆಯನ್ನು ಒಪ್ಪಿಕೊಳ್ಳುತ್ತೇವೆ. ಮತದಾರರು ಕೈಹಿಡಿಯುವ ವಿಶ್ವಾಸವಿತ್ತು. ಉಪಚುನಾವಣೆಯಲ್ಲಿ ಆದ ಹಿನ್ನಡೆ ಬಗ್ಗೆ ಪರಾಮರ್ಶೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಬಾಗಲಕೋಟೆಯಲ್ಲಿ ಮುಖ್ಯಮಂತ್ರಿಗಳು 15 ದಿನ ಬೀಡುಬಿಟ್ಟಿದ್ದರು. ಇಡೀ ಸಚಿವ ಸಂಪುಟವೇ ಬಾಗಲಕೋಟೆಯಲ್ಲಿ ಬೀಡು ಬಿಟ್ಟಿತ್ತು. ಉಪಚುನಾವಣೆಗಳ ಇತಿಹಾಸ ನಮ್ಮ ಕಣ್ಮುಂದೆ ಇದೆ. ಯಾವ ರೀತಿ ಸಂಘಟನೆ ಮಾಡಿ ಬಲ ತುಂಬಬೇಕು ಅಂತ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ.

