ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರ ಕೈಗೊಂಡಿರುವ ಸರ್ಕಾರಿ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಎಸ್ಮಾ ಜಾರಿ ಮಾಡುವ ಚಿಂತನೆಯನ್ನು ಸರ್ಕಾರ ಕೈಬಿಟ್ಟಿದೆ. ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ ವೈದ್ಯರ ಸಮಸ್ಯೆ ಪರಿಹರಿಸಲು ನಿರ್ಧರಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾಯಂ, ಗುತ್ತಿಗೆ, ಹೊರಗುತ್ತಿಗೆ ಹಾಗೂ ತಾತ್ಕಾಲಿಕ ಆಧಾರದಲ್ಲಿ ನೇಮಕವಾದ ಅಧಿಕಾರಿಗಳು, ವೈದ್ಯರು ಮತ್ತು ಇತರೆ ಸಿಬ್ಬಂದಿ ಸೇವೆಯನ್ನು ಎಸ್ಮಾ ವ್ಯಾಪ್ತಿಗೆ ತರುವ ಪ್ರಸ್ತಾಪದ ಬಗ್ಗೆ ಚರ್ಚೆ ನಡೆಸಲಾಗಿದೆ.
ಆದರೆ ಅಂತಹ ತೀರ್ಮಾನ ಬೇಡ. ವೈದ್ಯರು ಮತ್ತು ಸಿಬ್ಬಂದಿ ಸಂಘಟನೆ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ ಸೌಹಾರ್ದ ಪರಿಹಾರ ಹುಡುಕಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಂಪುಟ ಸಭೆ ಸೂಚಿಸಿದೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.

