ಬೆಂಗಳೂರು: ಬಿಹಾರ ಚುನಾವಣಾ ಫಲಿತಾಂಶದ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ ಚರ್ಚೆ ಕೇಳಿಬಂದಿತ್ತು. ಇದೀಗ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ತಿಳಿದುಬಂದಿದೆ.
ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದು, ಈ ವೇಳೆ ರಾಹುಲ್ ಗಾಂಧಿ ಸಚಿವ ಸಂಪುಟ ಪುನಾರಚನೆಗೆ ಒಪ್ಪಿಗೆ ನೀಡಿದ್ದಾರೆ. ಸಂಪುಟ ಪುನಾರಚನೆ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿ ಚರ್ಚಿಸಿ ಎಂದು ಹೇಳಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.
ಇನ್ನು ಸಚಿವ ಸಂಪುಟ ಪುನಾರಚನೆ ವೇಳೆ 8-12 ಸಚಿವರನ್ನು ಬದಲಾವಣೆ ಮಾಡುವ ಸಾಧ್ಯತೆ ಇದೆ. ಆರ್.ವಿ.ದೇಶಪಾಂಡೆ, ಬಿ.ನಾಗೇಂದ್ರ, ಹೆಚ್.ಸಿ.ಬಾಲಕೃಷ್ಣ, ಲಕ್ಷ್ಮಣ ಸವದಿ, ಸಂಗಮೇಶ್, ಶಿವಲಿಂಗೇಗೌಡ, ರೂಪಕಲಾ, ರಿಜ್ವಾನ್ ಅರ್ಷದ್, ಪ್ರಸಾದ್ ಅಬ್ಬಯ್ಯ ಅವರಿಗೂ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂಬ ವಿಚಾರ ಸುದ್ದಿಯಾಗುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಚಟುವಟಿಕೆಗಳು ಗರಿಗೆದರಿವೆ.
