HomeKarnatakaರೂಪ ಮೌದ್ಗಿಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ರೋಹಿಣಿ ಸಿಂಧೂರಿ

ರೂಪ ಮೌದ್ಗಿಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ರೋಹಿಣಿ ಸಿಂಧೂರಿ

ಬೆಂಗಳೂರು: ಸಾಮಾಜಿಕ ಜಾಲತಾಣ ಸೇರಿದಂತೆ ಸುದ್ದಿ ಮಾಧ್ಯಮಗಳ ಮೂಲಕ ನನ್ನ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಮಾನಹಾನಿ ಮಾಡಿರುವ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್‌ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು ಎಂದು ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ದೂರು ದಾಖಲಿಸಿದ್ದಾರೆ.

ಮಂಗಳವಾರ ನಗರದ 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಕೋರ್ಟ್‌ನಲ್ಲಿ ದೂರು ದಾಖಲಿಸಿದ ರೋಹಿಣಿ ಸಿಂಧೂರಿ, ಐಪಿಎಸ್ ಅಧಿಕಾರಿ ರೂಪಾ ಅವರು ಫೆ.18 ಮತ್ತು 19 ರಂದು ತಮ್ಮ ಫೇಸ್‌ಬುಕ್‌ ಅಕೌಂಟ್‌ನಲ್ಲಿ ನನ್ನ ವಿರುದ್ಧ ಇಲ್ಲಸಲ್ಲದ ಕೀಳು ಅಭಿರುಚಿಯಿಂದ ಕೂಡಿದ ಆರೋಪಗಳನ್ನು ಮಾಡಿದ್ದು, ಇವು ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡಿದಲ್ಲದೇ, ನನ್ನ ತೇಜೋವಧೆ ಮಾಡುವ ದುರುದ್ದೇಶವನ್ನು ಹೊಂದಿದೆ. ಇವು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಪರಿಣಾಮ ಬೀರಿದ್ದು, ಮಾನಸಿಕ ಹಿಂಸೆ ನೀಡುತ್ತಿದೆ ಎಂದು ಹೇಳಿದ್ದಾರೆ.

ಅಲ್ಲದೇ ಭಾರತೀಯ ಆಡಳಿತ ಸೇವೆಯ ನಿಯಮಗಳಿಗೆ ವಿರುದ್ಧವಾಗಿ ಸಾಮಾಜಿಕ ಮಾಧ್ಯಮಗಳ ಮುಂದೆ ಬಹಿರಂಗವಾಗಿ ನನ್ನನ್ನು ಟೀಕೆ ಮಾಡುವ ಮೂಲಕ ನನಗೆ ಮಾತ್ರವಲ್ಲದೆ ಸರ್ಕಾರಕ್ಕೂ ಮುಜುಗರ ಉಂಟು ಮಾಡಿದ್ದಾರೆ. ನನ್ನ ಇಷ್ಟು ವರ್ಷಗಳ ಪ್ರಾಮಾಣಿಕ ಸರ್ಕಾರಿ ನೌಕರಿಯ ನಿಷ್ಟೆಯನ್ನು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನಿಟ್ಡಿನಲ್ಲಿ ನನಗೆ ಆಗಿರುವ ಮಾನನಷ್ಟಕ್ಕೆ 1 ಕೋಟಿ ರೂಪಾಯಿ ಪರಿಹಾರ ಕೊಡಿಸಿಕೊಡಬೇಕು ಹಾಗೂ ರೂಪ ಅವರ ಮೇಲೆ ಸೂಕ್ತ ದಂಡನೀಯ ಕ್ರಮವನ್ನು ಶೀಘ್ರವಾಗಿ ಕೈಗೊಳ್ಳುವ ಮೂಲಕ ನನಗೆ ಪರಿಹಾರ ಸೂಚಿಸಬೇಕು ಎಂದು ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ.

ಈ ಕುರಿತು ವಕಾಲತ್ತು ವಹಿಸಿರುವ ವಕೀಲ ಎಂ.ಆರ್‌. ಅನಿಲ್‌ ಅವರು ರೋಹಿಣಿ ಸಿಂಧೂರಿ ಪರವಾದ ಖಾಸಗಿ ದೂರನ್ನು ನ್ಯಾಯಾಲಯಕ್ಕೆ ಸಲ್ಲಿಸಿ, ನ್ಯಾಯಾಧೀಶ ಬಿ.ಸಿ. ಚಂದ್ರಶೇಖರ ಅವರ ಮುಂದೆ ‘ಈ ಖಾಸಗಿ ದೂರನ್ನು ದಾಖಲಿಸಿಕೊಂಡು ಆರೋಪಿ ರೂಪಾ ಮೌದ್ಗಿಲ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ವಾದ ಮಂಡಿಸಿದರು. ಇದನ್ನು ಆಲಿಸಿದ ಕೋರ್ಟ್ ಹೆಚ್ಚಿನ ವಿಚಾರಣೆಯ ಕ್ರಮವಾಗಿ ಪ್ರಕರಣವನ್ನು ಮಾರ್ಚ್ 3ಕ್ಕೆ ಮುಂದೂಡಿದೆ.

For Latest News Updates, Join Our Whatsapp Community🚩
RELATED ARTICLES

Most Popular