HomeLatest NewsBREAKING : ಬೆಂಗಳೂರಲ್ಲಿ 'GBA' ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ಕೇಸ್  ; ಐವರು ಆರೋಪಿಗಳು...

BREAKING : ಬೆಂಗಳೂರಲ್ಲಿ ‘GBA’ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ಕೇಸ್  ; ಐವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಶಿವಾಜಿನಗರದಲ್ಲಿ ಮಂಗಳವಾರ ನಡೆದ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಕರ್ತವ್ಯ ನಿರತ ಅಧಿಕಾರಿಗಳ ಮೇಲೆ ದುಷ್ಕರ್ಮಿಗಳ ಗುಂಪು ಹಲ್ಲೆ ನಡೆಸಿ ಗೂಂಡಾಗಿರಿ ಮೆರೆದಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ಬಂಧಿತರಿಂದ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ.

ಏನಿದು ಘಟನೆ?

ಶಿವಾಜಿನಗರ ಬಸ್ ನಿಲ್ದಾಣದ ಸುತ್ತಮುತ್ತ ರಸ್ತೆಬದಿಯ ಅಕ್ರಮ ಒತ್ತುವರಿಯನ್ನು ತೆರವುಗೊಳಿಸುತ್ತಿದ್ದ ವೇಳೆ ಕೆಲವರು ಕಾರ್ಯಾಚರಣೆಗೆ ಅಡ್ಡಿಪಡಿಸಿ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದರು. ಬಳಿಕ ಏಕಾಏಕಿ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಅಧಿಕಾರಿಗಳು ಹಾಗೂ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಅವರನ್ನು ರಸ್ತೆಯಲ್ಲೇ ಬೆನ್ನಟ್ಟಿದ್ದರು. ಈ ವೇಳೆ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ GBA ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ಮಾಧವ್ ರಾವ್, ಎಇ ಗೌತಮ್ ಹಾಗೂ ಎಇ ರುಚಿತಾ ಅವರ ಮೇಲೆ ಹಲ್ಲೆ ನಡೆದಿತ್ತು. ಮಹಿಳಾ ಎಂಜಿನಿಯರ್ ರುಚಿತಾ ಅವರ ಮೇಲೆ ಪೆಪ್ಪರ್ ಸ್ಪ್ರೇ ಸಿಂಪಡಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದ್ದು, ಈ ಸಂಬಂಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಐವರು ಆರೋಪಿಗಳು ಅರೆಸ್ಟ್

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ದೃಶ್ಯಗಳು ಹಾಗೂ ಇತರ ಸಾಕ್ಷ್ಯಾಧಾರಗಳ ಆಧಾರದ ಮೇಲೆ ತನಿಖೆ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಾರ್ವಜನಿಕ ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಕಾನೂನು ಕ್ರಮ ಜರುಗಿಸಲಾಗಿದ್ದು, ಪ್ರಕರಣದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ತನಿಖೆ ಮುಂದುವರಿದಿದೆ.

ಸರ್ಕಾರಿ ಅಧಿಕಾರಿಗಳ ಮೇಲಿನ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಘಟನೆಯ ಹಿಂದಿನ ನಿಖರ ಕಾರಣ ಹಾಗೂ ಇತರ ಆರೋಪಿಗಳ ಪಾತ್ರ ತನಿಖೆಯ ಬಳಿಕ ಸ್ಪಷ್ಟವಾಗಲಿದೆ.

ಸಚಿವ ಕೃಷ್ಣಭೈರೇಗೌಡ ಹೇಳಿದ್ದೇನು..?

ಸುರಕ್ಷಿತ ಪಾದಾಚಾರಿ ಮಾರ್ಗ (ಫುಟ್‌ಪಾತ್) ಅಭಿಯಾನದಲ್ಲಿ ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿದ ಪ್ರತಿಯೊಬ್ಬರನ್ನೂ ಬಂಧಿಸಲಾಗುವುದು. ಈ ಬಗ್ಗೆ ಪೊಲೀಸ್ ಆಯುಕ್ತರು ಮತ್ತು ಬಿಬಿಎಂಪಿ (GBA) ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ.ಇವರು ಜೀವನೋಪಾಯಕ್ಕಾಗಿ ಕಷ್ಟಪಟ್ಟು ದುಡಿಯುವ ಬಡಜನರಲ್ಲ. ಇವರು ಸಮಾಜಘಾತುಕ ಶಕ್ತಿಗಳು. ಮಾನ್ಯ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವನ್ನು ಜಾರಿಗೊಳಿಸುವಾಗ ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸುವುದು ಕಾನೂನಿನ ಗಂಭೀರ ಉಲ್ಲಂಘನೆಯಾಗಿದೆ. ಕಾನೂನಿನಂತೆ ಸಾರ್ವಜನಿಕ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಪರವಾಗಿ ನಾವು ದೃಢವಾಗಿ ನಿಲ್ಲುತ್ತೇವೆ. ಸಾರ್ವಜನಿಕ ಕರ್ತವ್ಯದಲ್ಲಿರುವ ಅಧಿಕಾರಿಗಳ ಮೇಲೆ ಹಲ್ಲೆ ನಡೆಸುವ ಯಾರನ್ನೂ ಸಹ ನಾವು ಬಿಡುವುದಿಲ್ಲ.ನಾನು ಜಿಬಿಎ (GBA) ಮತ್ತು ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದು ಪರಿಸ್ಥಿತಿಯನ್ನು ಗಮನಿಸುತ್ತಿದ್ದೇನೆ. ಅಲ್ಲದೆ ನಾವು ಒಟ್ಟಾಗಿ ಮಾದರಿಯಾಗುವಂತಹ ಕಠಿಣ ಕ್ರಮಗಳನ್ನು ಜರುಗಿಸುತ್ತಿದ್ದೇವೆ ಎಂದು ಬೆಂಗಳೂರು ನಗರಾಭಿವೃದ್ದಿ ಸಚಿವ ಕೃಷ್ಣಭೈರೇಗೌಡ ಪೋಸ್ಟ್ ಮಾಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular