ಬೆಂಗಳೂರು: ಬಾಂಗ್ಲಾದೇಶದ ಅಕ್ರಮ ವಲಸಿಗರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡುವ ಮೂಲಕ ಸಮಾಜದ ಶಾಂತಿ ಸುವ್ಯವಸ್ಥೆಗೆ ಮತ್ತು ಕೋಮು ಸೌಹಾರ್ದಕೆ ಧಕ್ಕೆ ತಂದ ಆರೋಪದ ಮೇಲೆ ರಾಷ್ಟ್ರ ರಕ್ಷಣೆ ಪಡೆ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಸೈಬರ್ ಠಾಣೆ ಪೋಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜನವರಿ 22ರಂದು ಪುನೀತ್ ಕೆರೆಹಳ್ಳಿ ಮತ್ತು ಸಹಚರರು ಕೆಂಪಾಪುರದ ಶ್ವೇತಾ ಫಾರಂ ರಸ್ತೆಯ ಸಕೀನಾ ತಸ್ನಿಮ್ ಎಂಬುವರಿಗೆ ಸೇರಿದ ಜಾಗದಲ್ಲಿ ಗಲಾಟೆ ನಡೆಸಿದ್ದರು. ಬಾಂಗ್ಲಾದೇಶಿಯರನ್ನು ಮಾನವ ಕಳ್ಳ ಸಾಗಾಣಿಕೆ ಮೂಲಕ ಕರೆತಂದು ಅಕ್ರಮ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗಿದೆ. ಪೊಲೀಸ್ ಮಹಾ ನಿರ್ದೇಶಕ ಡಾ. ಸಲೀಂ ಅವರ ಬೇನಾಮಿ ಆಸ್ತಿ ಇದಾಗಿದೆ ಎಂದು ಸುಳ್ಳು ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.

