ಬೆಂಗಳೂರು: ಬೆಂಗಳೂರಿನಲ್ಲಿ ಕಚೇರಿ, ಕಾರ್ಖಾನೆ ಸೇರಿದಂತೆ ವಿವಿಧ ಕಾರ್ಯಗಳಿಗೆ ಕುಟುಂಬ ಸದಸ್ಯರು ತೆರಳುವ ಹಿನ್ನೆಲೆಯಲ್ಲಿ ಸಂಜೆ 6ರಿಂದ ರಾತ್ರಿ 9 ಗಂಟೆಯವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಕೆಲಸ ಕಾರ್ಯಗಳಿಗೆ ತೆರಳುವವರ ಸಂಖ್ಯೆ ಹೆಚ್ಚಾಗಿದೆ. ಗಣತಿದಾರರು ಮನೆಗೆ 2-3 ಬಾರಿ ಭೇಟಿ ನೀಡಿದರೂ ಕುಟುಂಬದ ಸದಸ್ಯರು ಸಿಗುತ್ತಿಲ್ಲ. ಮನೆ ಬಾಗಿಲು ಹಾಕಿರುತ್ತದೆ. ಹೀಗಾಗಿ ಸಂಜೆ 6ರಿಂದ ರಾತ್ರಿ 9ರವರೆಗೆ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ.
ಸಂಜೆ 6ರಿಂದ ರಾತ್ರಿ 9 ಗಂಟೆಯವರೆಗೆ ಸಮೀಕ್ಷೆ ನಡೆಸುವ ಕಾರ್ಯಕ್ಕೆ ಮಹಿಳಾ ಗಣತಿದಾರರಿಗೆ ವಿನಾಯಿತಿ ನೀಡಲಾಗಿದೆ. ಗಣತಿದಾರರು ತಂಡಗಳನ್ನು ರಚಿಸಿಕೊಂಡು ಸಂಜೆ ವೇಳೆಯಲ್ಲಿ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಕಾರ್ಯ ಮಾಡಲಾಗುವುದು. ಮೂರ್ನಾಲ್ಕು ದಿನ ಸಂಜೆ ಸಮೀಕ್ಷೆ ನಡೆಸಿ ನಂತರ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.