ಶಿವಮೊಗ್ಗ: ತೀರ್ಥಹಳ್ಳಿಯ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಕೇಂದ್ರದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಆರೋಪ ಕೇಳಿಬಂದಿದ್ದು, ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು, ಅಧಿಕಾರಿಗಳ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಘಟನೆ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮಾಧ್ಯಮಗಳ ಮೂಲಕ ವಿಚಾರ ತಿಳಿದುಬಂದಿದೆ. ವಿದ್ಯಾರ್ಥಿಗಳ ಜೊತೆ ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ. ಈ ಬಗ್ಗೆ ನಿರ್ದೇಶನ ನೀಡುವ ಅಧಿಕಾರ ಯಾವ ಅಧಿಕಾರಿಗೂ ಇಲ್ಲ. ಈ ರೀತಿ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶವೂ ಇಲ್ಲ ಎಂದು ಹೇಳಿದರು.
ಇದು ನನ್ನ ವ್ಯಾಪ್ತಿಗೆ ಬರಲ್ಲ. ಆದರೂ ಸಂಬಂಧಪಟ್ಟ ಇಲಾಖೆ ಜೊತೆ ಚರ್ಚಿಸುತ್ತೇನೆ. ಈ ಘಟನೆ ನನ್ನ ಜಿಲ್ಲೆಯಲ್ಲಿ ಆಗಿರುವುದರಿಂದ ಕ್ರಮಕ್ಕೆ ಸೂಚಿಸುತ್ತೇನೆ. ಉನ್ನತ ಶಿಕ್ಷಣ ಸಚಿವ ಸುಧಾಕರ್ ಅವರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳಲು ಹೇಳುತ್ತೇನೆ ಎಂದರು.
ವಿದ್ಯಾರ್ಥಿಗಳ ವಿಚಾರದಲ್ಲಿ ಈರೀತಿ ಮಾಡುವುದು ಸರಿಯಲ್ಲ. ಇದು ಸೂಕ್ಷ್ಮ ವಿಚಾರ. ಎಲ್ಲಾ ಜತೈ, ಧರ್ಮಗಳನ್ನು ಗೌರವಿಸಬೇಕು. ಸಿಇಟಿ ಸೇರಿದಂತೆ ಯಾವುದೇ ಪರೀಕ್ಷೆ ಆಗಿರಲಿ ಹೀಗೆ ಆಗಬಾರದು ಎಂದು ಹೇಳಿದರು.