ಬೆಂಗಳೂರು: ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳ ಕ್ರಮ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ.
ಶಿವಮೊಗ್ಗದ ಸಿಇಟಿ ಪರೀಕ್ಷಾ ಕೇಂದ್ರವೊಂದರಲ್ಲಿ ವಿದ್ಯಾರ್ಥಿಗೆ ಅಲ್ಲಿನ ಸಿಬ್ಬಂದಿಗಳು ಜನಿವಾರ ತೆಗೆಸಿ ಪರೀಕ್ಷಾ ಕೇಂದ್ರಕ್ಕೆ ಬಿಟ್ಟಿದ್ದಾರೆ. ಬೀದರ್ ನಲ್ಲಿ ಜನಿವಾರ ತೆಗೆಯದ ಕಾರಣ ವಿದ್ಯಾರ್ಥಿಯನ್ನು ಪರೀಕ್ಷಾ ಕೇಂದ್ರದಿಂದಲೇ ಹೊರ ಕಳುಹಿಸಲಾಗಿದೆ. ಎರಡೂ ಘಟನೆಗಳ ಬಗ್ಗೆ ಪರೀಕ್ಷಾ ಕೇಂದ್ರದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಕ್ರಮ ಕೈಗೊಳ್ಳುವಂತೆ ಬ್ರಾಹ್ಮಣ ಮಹಾಸಭಾ, ವಿಪ್ರ ಸಂಘಟನೆ ಆಗ್ರಹಿಸಿವೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್, ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗೆ ಜನಿವಾರ ತೆಗೆಸಿದ್ದೇ ಆದರೆ ಅದು ಅತಿರೇಕದ ವರ್ತನೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದು ತಿಳಿಸಿದ್ದಾರೆ.
ಈ ರೀತಿ ನಡೆದುಕೊಂಡ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಯಾವುದೇ ಪರೀಕ್ಷಾ ಕೇಂದ್ರಗಳಲ್ಲಿ ಈ ರೀತಿ ಆಗಿದ್ದರೆ ಗಂಭೀರವಾಗಿ ಪರಿಗಣಿಸುತ್ತೇವೆ. ಘಟನೆಗಳ ಬಗ್ಗೆ ಅಧಿಕರಿಗಳ ಬಳಿ ವರದಿ ಪಡೆಯುತ್ತೇನೆ. ಯಾವುದೇ ಜಾತಿ, ಧರ್ಮಗಳ ಆಚರಣೆ, ಸಂಪ್ರದಾಯಕ್ಕ್ರೆ ಗೌರವ ಕೊಡಬೇಕು. ಇಂತಹ ಘಟನೆಗಳಿಗೆ ಪ್ರೋತ್ಸಾಹ ಕೊಡಲ್ಲ. ಈ ಘಟನೆಗಳ ಬಗ್ಗೆ ಮುಂದೆ ಯಾವ ಕ್ರಮ ಕೈಗೊಳ್ಳಬೇಕು? ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದಲೂ ಯೋಚಿಸಲಾಗುವುದು ಎಂದು ಹೇಳಿದರು.