ಬೆಂಗಳೂರು: ಸಿಇಟಿ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ಬೆಂಗಳೂರಿನ ಮಡಿವಾಳ ಪರೀಕ್ಷ ಅಕೇಂದ್ರದಲ್ಲಿ ನಡೆದಿದ್ದು, ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ವಿಚಾರವಾಗಿ ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳಿಗೆ ಸಿಬ್ಬಂದಿಗಳು ಜನಿವಾರ ತೆಗೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆದರೆ ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಯಾವುದೇ ಅಧಿಕೃತ ವರದಿ ಬಂದಿಲ್ಲ ಎಂದಿದ್ದಾರೆ.
ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ್ದು ನಿಜವೆಂದು ಸಾಬೀತಾದರೆ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಪರೀಕ್ಷೆಗಳನ್ನು ಖಾಸಗಿ ಮತ್ತು ಸರ್ಕಾರಿ ಕಾಲೇಜುಗಳಲ್ಲಿ ನಡೆಸಲಾಗುತ್ತದೆ. ಸಿಬ್ಬಂದಿಯನ್ನು ವ್ಯಾಪಕವಾಗಿ ಬಳಸಿಕೊಳ್ಳಲಾಗುತ್ತದೆ. ಈ ಸಂದರ್ಭದಲ್ಲಿ ಯಾವುದೇ ಸಿಬ್ಬಂದಿ ಅತಿರೇಕದ ವರ್ತನೆ ತೋರಿದ್ದರೆ, ಉದ್ದೇಶಪೂರ್ವಕವಾಗಿ ಈ ರಿತಿ ನಡೆದುಕೊಂಡಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಪ್ರಕರಣದ ಹಿನ್ನೆಲೆ:
ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ಆರಂಭವಾಗಿದ್ದು, ಈ ಬಾರಿಯೂ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು ವಿದ್ಯಾರ್ಥಿಗಳ ಜನಿವಾರ ತೆಗೆಸಿ ಪರೀಕ್ಷೆ ಬರೆಯಿಸಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ.
ಕಳೆದ ವರ್ಷ ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗ, ಧಾರವಾಡ, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು ವಿದ್ಯಾರ್ಥಿಗಳ ಜನಿವಾರ ತೆಗೆಸಿ ಪರೀಈಕ್ಷೆ ಬರೆಸಿದ್ದು, ಭಾರಿ ವಿವಾದಕ್ಕೆ ಹಾಗೂ ಆಕ್ರೋಶಕ್ಕೆ ಕಾರಣವಾಗಿತ್ತು. ಈ ವಿಚಾರ ಹೈಕೋರ್ಟ್ ಮೆಟ್ಟಿಲೇರಿತ್ತು. ರಾಜ್ಯ ಸರ್ಕಾರಕ್ಕೂ ಕೋರ್ಟ್ ಚಾಟಿ ಬೀಸಿತ್ತು.
ಈಗ ಸಿಇಟಿ ಪರೀಕ್ಷೆಗೆ ನೀಡಲಾಗಿರುವ ಗೈಡ್ ಲೈನ್ ನಲ್ಲಿ ಕೂಡ ಜನಿವಾರ ತೆಗೆಯುವಂತೆ ನಿಯಮವಿಲ್ಲವಾದರೂ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಪರೀಕ್ಷೆಗೆ ಅವಕಾಶ ನೀಡಲಾಗಿದೆ. ಇದು ವಿದ್ಯಾರ್ಥಿಗಳ ಪೋಷಕರ ಆಕ್ರೋಶಕ್ಕೆ ಕಾರಣವಾಗಿದ್ದು, ಧಾರ್ಮಿಕ ಭಾವನೆಗೆ ಪದೇ ಪದೇ ಧಕ್ಕೆ ತರಲಾಗುತ್ತಿರುವ ಪರೀಕ್ಷಾ ಪ್ರಧಿಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಸಿಇಟಿ ಪರೀಕ್ಷೆಯ ಮೊದಲ ದಿನವಾದ ಏಪ್ರಿಲ್ 23ರಂದು ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿಗಳು ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಾರೆ. ಪರೀಕ್ಷಾ ಕೇಂದ್ರಕ್ಕೆ ಜನಿವಾರ ಧರಿಸಿ ಬಂದಿದ್ದ ವಿದ್ಯಾರ್ಥಿಗಳಿಗೆ ಜನಿವಾರ ತೆಗೆದಿಡುವಂತೆ ಸೂಚಿಸಿದ್ದಾರೆ. ಜನಿವಾರ ತೆಗೆಯದಿದ್ದರೆ ಪರೀಕ್ಷೆಗೆ ಬಿಡುವುದಿಲ್ಲ. ಮನೆಗೆ ಹೋಗಿ ಎಂದು ಗದರಿದ್ದಾರೆ. ಐದಕ್ಕೂ ಹೆಚ್ಚು ವಿದ್ಯಾರ್ಥಿಗಳ ಜನಿವಾರ ತೆಗೆಸಲಾಗಿದೆ. ಇದರಿಂದ ಆತಂಕಕ್ಕೊಳಗಾದ ಹಲವು ವಿದ್ಯಾರ್ಥಿಗಳು ಜನಿವಾರ ತೆಗೆದಿಟ್ಟು ಪರೀಕ್ಷೆಗೆ ಹಾಜರಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಇಂದು ಪೋಷಕರು ಸಿಇಟಿ ಪರೀಕ್ಷಾ ಕೇಂದ್ರದ ಬಳಿ ಧಾವಿಸಿದ್ದು, ಪರೀಕ್ಷಾ ಕೇಂದ್ರದ ಸಿಬ್ಬಂದಿಗಳ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಬಾರಿ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು ಧಾರ್ಮಿಕ ಭಾವನೆಗೆ ಹಾಗೂ ಸಮುದಾಯದ ಅಸ್ಮಿತತೆಗೆ ಧಕ್ಕೆತರುತ್ತಿದ್ದಾರೆ. ಇದು ಖಂಡನೀಯ. ಹೀಗೆ ಮುಂದುವರೆದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.

