ಬೆಂಗಳೂರು: ಸಿಇಟಿ ಪರೀಕ್ಷೆ ಬರೆಯಲಿ ಬಂದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ಭಾರಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಜನಿವಾರ ತೆಗೆಸಿದ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) ಪತ್ರ ಬರೆದಿದೆ.
ವಸ್ತ್ರಸಂಹಿತೆ ಅಧಿಕಾರಿಗಳ ನೇಮಕ ಮಾಡಿದ್ದರೂ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳ ಜನಿವಾರ ತೆಗೆಸದಂತೆ ಸೂಚನೆ ನೀಡಲಾಗಿತ್ತು. ಆದರೂ ಜನಿವಾರ ತೆಗೆಸಿದ್ದು ಉದ್ದೇಶಪೂರ್ವಕ ಘಟನೆಯಂತೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿ ಕ್ರಮವಹಿಸಿದ ವಿವರ ನೀಡುವಂತೆ ಕೆಇಎ ಪತ್ರದ ಮೂಲಕ ತಿಳಿಸಿದೆ.
2026ನೇ ಸಾಲಿನ ಸಿಇಟಿ ಪರೀಕ್ಷೆ ವೇಳೆ ಬೆಂಗಳೂರು ಕೇಂದ್ರದಲ್ಲಿ ಏಪ್ರಿಲ್ 23ರ ಭೌತಶಾಸ್ತ್ರ ವಿಷಯದ ಪರೀಕ್ಷೆಗೆ ಹಾಜರಾಗಲು ಬಂದಿದ್ದ ಕೆಲವು ಅಭ್ಯರ್ಥಿಗಳ ಜನಿವಾರವನ್ನು ತೆಗೆಸಲು ಅಲ್ಲಿಯ ಸಿಬ್ಬಂದಿ ಸೂಚಿಸಿರುತ್ತಾರೆ. ನಂತರ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಿರುತ್ತಾರೆ ಎಂದು ಮಾಧ್ಯಮಗಳ ಮೂಲಕ ತಿಳಿದುಬಂದಿದೆ. ಇದೊಂದು ಸೂಕ್ಷ್ಮ ವಿಚಾರವಾಗಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಹಳ ಸ್ಪಷ್ಟವಾಗಿ ವಸ್ತ್ರ ಸಂಹಿತೆಯ ಬಗ್ಗೆ ವಿವರಿಸಿದೆ. ಕಳೆದ ವರ್ಷದಲ್ಲಿ ನಡೆದ ಇದೇ ತರಹದ ಘಟನೆ ಉಲ್ಲೇಖಿಸಿ ಜನಿವಾರ, ಲಿಂಗ ಇತ್ಯಾದಿ ಧಾರ್ಮಿಕ ದಿರಿಸುಗಳನ್ನು ತೆಗೆಯಬಾರದೆಂದು ಸ್ಪಷ್ಟವಾಗಿ ತರಬೇತಿಯಲ್ಲಿ ತಿಳಿಸಲಾಗಿದೆ. ಆದರೂ ಇಂತಹ ಘಟನೆ ನಡೆದಿದ್ದರೆ ಯಾರೋ ಉದ್ದೇಶ ಪೂರ್ವಕವಾಗಿ ಮಾಡಿದಂತೆ ಮೇಲ್ನೋಟಕ್ಕೆ ಕಂಡುಬರುತ್ತಿದೆ. ಹೀಗಾಗಿ ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ವಿಚಾರಣೆ ನಡೆಸಿ ನಿಯಮಾನುಸಾರ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಪೂರ್ಣ ವರದಿ ಸಲ್ಲಿಸುವಂತೆ ಬೆಂಗಳೂರು ನಗರ ಡಿಸಿಗೆ ಬರೆದ ಪತ್ರದಲ್ಲಿ ಕೆಇಎ ಆಗ್ರಹಿಸಿದೆ.
ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆಯ ಮೊದಲ ದಿನವೇ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ವಿದ್ಯಾರ್ಥಿಗಳು ಧರಿಸಿದ್ದ ಜನಿವಾರ ತೆಗೆಯದೇ ಪರೀಕ್ಷೆಗೆ ಅವಕಾಶ ನೀಡುವುದಿಲ್ಲ ಎಂದು ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು ತಾಕೀತು ಮಾಡಿದ್ದರು. ಇದರಿಂದ ಅನಿವಾರ್ಯವಾಗಿ ವಿದ್ಯಾರ್ಥಿಗಳು ಜನಿವಾರವನ್ನು ತೆಗೆದಿಟ್ಟು ಪರೀಕ್ಷೆಗೆ ಹಾಜರಾಗಿದ್ದರು. ಸುಮಾರು ಐವರು ವಿದ್ಯಾರ್ಥಿಗಳಿಗೆ ಸಿಬ್ಬಂದಿಗಳು ಜನಿವಾರ ತೆಗೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಈ ಘಟನೆ ಬೆನ್ನಲ್ಲೇ ಇಂದು ಪೋಷಕರು ಹಾಗೂ ಧಾರ್ಮಿಕ ಮುಖಂಡರು ಪರೀಕ್ಷಾ ಕೇಂದ್ರದ ಬಳಿ ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಬಿತ್ತಿ ಪತ್ರ ಹಿಡಿದು ಪ್ರತಿಭಟಿಸಿದ್ದರು. ಪ್ರಕರಣ ತೀವ್ರ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಡಿಸಿಗೆ ತನಿಖೆಗೆ ಸೂಚಿಸುತ್ತಿದ್ದಂತೆ ಎಚ್ಚೆತ್ತ ಕೃಪಾನಿಧಿ ಕಾಲೇಜು ಆಡಳಿತ ಮಂಡಳಿ ಜನಿವಾರ ತೆಗೆಸಿದ್ದ ಮೂವರು ಸಿಬ್ಬಂದಿಗಳ ವಿರುದ್ಧ ಶಿಸ್ತುಕ್ರಮ ಕೈಗೊಂಡಿದೆ,
ಕೃಪಾನಿಧಿ ಕಾಲೇಜಿನ ಸಿಬ್ಬಂದಿಗಳಾದ ಸುಧಾಕರ್, ಗಿರಿಜಮ್ಮ ಹಾಗೂ ಸರಿತಾ ಅವರನ್ನು ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ್ದಾರೆ. ತನಿಖೆ ವರದಿ ಬರುವವರೆಗೂ ಮುಂದಿನ ಆದೇಶದವರೆಗೆ ಮೂವರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.

