ದಾವಣಗೆರೆ: ಮಗಳ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲು ವಿಳಂಬವಾಗಿದೆ ಎಂದು ಆರೋಪಿಸಿ ಮನನೊಂದ ತಂದೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ನಡೆದಿದೆ. ಘಟನೆ ಬಳಿಕ ಮೃತರ ಕುಟುಂಬಸ್ಥರು ಹಾಗೂ ಸಂಬಂಧಿಕರು ಚನ್ನಗಿರಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ, ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಹಾಗೂ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಸುಮಾರು ಒಂದೂವರೆ ತಿಂಗಳ ಹಿಂದೆ ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗಿದ್ದರೂ ಆರೋಪಿಯ ಬಂಧನವಾಗಿರಲಿಲ್ಲ ಎನ್ನುವುದು ಕುಟುಂಬಸ್ಥರ ಆರೋಪವಾಗಿದೆ. ಈ ನಡುವೆ ಆರೋಪಿ ಕಡೆಯವರಿಂದ ದೂರುದಾರ ಕುಟುಂಬಕ್ಕೆ ಕಿರುಕುಳ ನೀಡಲಾಗುತ್ತಿತ್ತು ಎಂದು ಮೃತರ ಸಂಬಂಧಿಕರು ಆರೋಪಿಸಿದ್ದಾರೆ.
ಮಗಳ ಭವಿಷ್ಯ ಹಾಗೂ ಪ್ರಕರಣದ ತನಿಖೆಯ ಕುರಿತು ಆತಂಕಗೊಂಡಿದ್ದ ತಂದೆ ತೀವ್ರವಾಗಿ ಮನನೊಂದಿದ್ದರು ಎನ್ನಲಾಗಿದೆ. ಗುರುವಾರ ಅವರು ತಮ್ಮ ತೋಟಕ್ಕೆ ತೆರಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದ ಬಳಿಕ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಕ್ರೋಶಗೊಂಡು ಮೃತದೇಹವನ್ನು ಚನ್ನಗಿರಿ ಪೊಲೀಸ್ ಠಾಣೆ ಎದುರು ಇಟ್ಟು ಪ್ರತಿಭಟನೆ ನಡೆಸಿದ್ದಾರೆ.
ಪೊಲೀಸ್ ಠಾಣೆ ಎದುರು ಆಕ್ರೋಶ
ಆರೋಪಿಯನ್ನು ಕೂಡಲೇ ಬಂಧಿಸಬೇಕು, ಪ್ರಕರಣದಲ್ಲಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಮತ್ತು ತಂದೆಯ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿ ಪ್ರತಿಭಟನಾನಿರತರ ಮನವೊಲಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಬಳಿಕ ಮೃತದೇಹವನ್ನು ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಯಿತು.
ಆತ್ಮಹತ್ಯೆಗೆ ಪ್ರಚೋದನೆ ಆರೋಪ
ತಂದೆಯ ಆತ್ಮಹತ್ಯೆಗೆ ಆರೋಪಿಯ ಕಡೆಯವರ ಕಿರುಕುಳ ಹಾಗೂ ಪ್ರಕರಣದಲ್ಲಿ ಆರೋಪಿಯ ಬಂಧನ ವಿಳಂಬವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಸಂಪೂರ್ಣ ಹಿನ್ನೆಲೆ, ಆರೋಪಗಳ ಸತ್ಯಾಸತ್ಯತೆ ಹಾಗೂ ಆತ್ಮಹತ್ಯೆಗೆ ಕಾರಣವಾದ ಅಂಶಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669
(ಹಕ್ಕುತ್ಯಾಗ: ಈ ಲೇಖನವು ಯಾವುದೇ ರೂಪದಲ್ಲಿ ಸ್ವಯಂ-ಹಾನಿ ಅಥವಾ ಆತ್ಮಹತ್ಯೆಯನ್ನು ಉತ್ತೇಜಿಸಲು, ಪ್ರೋತ್ಸಾಹಿಸಲು ಅಥವಾ ಸಂವೇದನಾಶೀಲಗೊಳಿಸಲು ಉದ್ದೇಶಿಸಿಲ್ಲ. ನೀವು ಅಥವಾ ನಿಮಗೆ ತಿಳಿದಿರುವ ಯಾರಾದರೂ ಭಾವನಾತ್ಮಕ ಯಾತನೆ, ಆತ್ಮಹತ್ಯಾ ಆಲೋಚನೆಗಳು ಅಥವಾ ಮಾನಸಿಕ ಆರೋಗ್ಯ ಬಿಕ್ಕಟ್ಟನ್ನು ಅನುಭವಿಸುತ್ತಿದ್ದರೆ, ದಯವಿಟ್ಟು ತಕ್ಷಣದ ವೃತ್ತಿಪರ ಸಹಾಯವನ್ನು ಪಡೆಯಿರಿ. ಭಾರತದಲ್ಲಿ, ನೀವು AASRA (24/7) ಅನ್ನು ಸಂಪರ್ಕಿಸಬಹುದು: 91-9820466726 ಅಥವಾ ವಿಶ್ವಾಸಾರ್ಹ ಮಾನಸಿಕ ಆರೋಗ್ಯ ವೃತ್ತಿಪರರು, ವೈದ್ಯರು ಅಥವಾ ಸ್ಥಳೀಯ ತುರ್ತು ಸೇವೆಗಳನ್ನು ಸಂಪರ್ಕಿಸಬಹುದು.)

