ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ನಡುರಾತ್ರಿ ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಶನಿವಾರ ರಾತ್ರಿ ನಡೆದಿದೆ. ಈ ಭೀಕರ ಹತ್ಯೆಯ ದೃಶ್ಯಗಳು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಸಾರ್ವಜನಿಕರಲ್ಲಿ ನಡುಕ ಹುಟ್ಟಿಸಿದೆ.
ಮೃತ ವ್ಯಕ್ತಿಯನ್ನು ರೌಡಿಶೀಟರ್ ಕಣ್ಣನ್ ಎಂದು ಗುರುತಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸಿಸಿಟಿವಿಯಲ್ಲಿ ಸೆರೆಯಾಯ್ತು ನಡುಗಿಸುವ ಕೃತ್ಯ
ವೈರಲ್ ಆಗಿರುವ ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಕಣ್ಣನ್ ರಸ್ತೆಬದಿಯಲ್ಲಿ ನಿಂತು ತನ್ನ ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಿದ್ದನು. ಆ ಸಮಯದಲ್ಲಿ ಏಕಾಏಕಿ ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಬಂದ ಮೂವರು ದುಷ್ಕರ್ಮಿಗಳು ಆತನ ಮೇಲೆ ಮುಗಿಬಿದ್ದಿದ್ದಾರೆ.
ಅನಿರೀಕ್ಷಿತ ದಾಳಿಯಿಂದ ತಪ್ಪಿಸಿಕೊಳ್ಳಲು ಆತ ಯತ್ನಿಸಿದರೂ, ಆತನನ್ನು ನೆಲಕ್ಕೆ ಕೆಡವಿ ಮನಬಂದಂತೆ ಮಾರಕಾಸ್ತ್ರಗಳಿಂದ ಕೊಚ್ಚಿದ್ದಾರೆ. ಈ ವೇಳೆ ರಸ್ತೆಯಲ್ಲಿದ್ದ ಕೆಲ ಸ್ಥಳೀಯರು ಮತ್ತು ದಾರಿಹೋಕರು ಹಂತಕರನ್ನು ತಡೆದು ಆತನನ್ನು ರಕ್ಷಿಸಲು ಧಾವಿಸಿದರೂ, ರೋಷಾವೇಶದಲ್ಲಿದ್ದ ಕಿರಾತಕರು ದಾಳಿ ಮುಂದುವರಿಸಿ ಆತ ಸ್ಥಳದಲ್ಲೇ ರಕ್ತದ ಮಡುವಿನಲ್ಲಿ ಕೊನೆಯುಸಿರೆಳೆಯುವಂತೆ ಮಾಡಿ ಪರಾರಿಯಾಗಿದ್ದಾರೆ.
ಹಳೆ ದ್ವೇಷ ಶಂಕೆ, ಐವರ ಹೆಡೆಮುರಿ ಕಟ್ಟಿದ ಪೊಲೀಸರು
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಈ ಕೊಲೆಯ ಹಿಂದೆ ಹಳೆಯ ವೈಷಮ್ಯವಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ತನಿಖೆ ಚುರುಕುಗೊಳಿಸಿದ ಪೊಲೀಸರು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಐವರು ಶಂಕಿತರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ರಾಜಕೀಯ ಸಂಚಲನ: ಸರ್ಕಾರದ ವಿರುದ್ಧ ಉದಯನಿಧಿ ಸ್ಟಾಲಿನ್ ಕಿಡಿ
ಈ ಹತ್ಯೆ ತಮಿಳುನಾಡು ರಾಜಕೀಯದಲ್ಲೂ ಭಾರಿ ಬಿರುಗಾಳಿ ಎಬ್ಬಿಸಿದೆ. ವಿಧಾನಸಭೆಯಲ್ಲಿ ಪೊಲೀಸ್ ಇಲಾಖೆಯ ಅನುದಾನ ಬೇಡಿಕೆಗಳ ಮೇಲಿನ ಚರ್ಚೆಗೆ ಮುಖ್ಯಮಂತ್ರಿಗಳು ಉತ್ತರಿಸಲು ಸಜ್ಜಾಗಿರುವ ಮುನ್ನಾದಿನವೇ ರಾಜಧಾನಿಯಲ್ಲಿ ಇಂತಹ ಭೀಕರ ಕೊಲೆ ನಡೆದಿರುವುದನ್ನು ಪ್ರತಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, “ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಕೊಲೆಯಾದ ರೌಡಿಶೀಟರ್ ತನ್ನ ಜೀವ ರಕ್ಷಣೆಗಾಗಿ ಆಡಳಿತಾರೂಢ ಟಿವಿಕೆ (TVK) ಪಕ್ಷವನ್ನು ಸೇರಿದ್ದ ಎನ್ನಲಾಗಿದೆ. ಮುಖ್ಯಮಂತ್ರಿಗಳು ಸದನದಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಮಾತನಾಡುವ ಮುನ್ನಾದಿನವೇ ಅವರದ್ದೇ ಪಕ್ಷದ ಕಾರ್ಯಕರ್ತನ ಹತ್ಯೆಯಾಗಿರುವುದು ನಾಚಿಕೆಗೇಡು. ಇದಕ್ಕೆಲ್ಲಾ ಡಿಎಂಕೆಯನ್ನು ದೂರುವುದನ್ನು ಬಿಟ್ಟು, ಸರ್ಕಾರ ಜನಸಾಮಾನ್ಯರ ಸುರಕ್ಷತೆಯನ್ನು ಖಚಿತಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು,” ಎಂದು ವಾಗ್ದಾಳಿ ನಡೆಸಿದ್ದಾರೆ.

