ಚಿಕ್ಕಬಳ್ಳಾಪುರ: ಥಾರ್, ಆಟೋ, ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಈ ದುರಂತ ಸಂಭವಿಸಿದೆ.
ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಆಟೋದಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. 10 ಜನರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳ ಪೈಕಿ ಮತ್ತೋರ್ವ ವ್ಯಕ್ತಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ರಸ್ತೆಯಲ್ಲಿ ವೇಗವಾಗಿ ಬಂದ ಥಾರ್ ಕಾರು ತನ್ನ ಮುಂದೆ ಚಲಿಸುತ್ತಿದ್ದ ಆಟೋಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ನಿಯಂತ್ರಣ ತಪ್ಪಿ ಮುಂಭಾಗದಲ್ಲಿದ್ದ ಕ್ಯಾಂಟರ್ ವಾಹನಕ್ಕೆ ಅಪ್ಪಳಿಸಿದೆ. ಪರಿಣಾಮವಾಗಿ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಐವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಉಮಾದೇವಿ (55), ವಿಜಯಾ (40), ಲಕ್ಷ್ಮಮ್ಮ (50), ಚಾಲಕ ಆಂಜಿನಪ್ಪ (35), ಸರೋಜಮ್ಮ ಹಾಗೂ ಇನ್ನೋರ್ವ ವ್ಯಕ್ತಿ ಮೃತರು. ಎಲ್ಲರೂ ಬಾಗೇಪಲ್ಲಿ ಟೌನ್ ನಿವಾಸಿಗಳು ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

