ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ಸಿಐಡಿ ವಶಕ್ಕೆ ಪಡೆದುಕೊಂಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಅಸಹಕಾರ ತೋರಿದ ಹಿನ್ನೆಲೆಯಲ್ಲಿ ಜ್ಞಾನೇಂದ್ರಕುಮಾರ್ ಅವರನ್ನು ಸಿಐಡಿ ವಶಕ್ಕೆ ಪಡೆದುಕೊಂಡಿದೆ. ನಿನ್ನೆ ಸುದೀರ್ಘ 11 ಗಂಟೆಗಳ ಕಾಲ ಸಿಐಡಿ ಅಧಿಕಾರಿಗಳು ಜ್ಞಾನೇಂದ್ರ ಕುಮಾರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು.
ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ದಿನಗಳಿಂದ ಜ್ಞಾನೇಂದ್ರ ಕುಮಾರ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿತ್ತು. ಸಿಐಡಿ ಅಧಿಕಾರಿ ರಾಘವೇಂದ್ರ ಹೆಗಡೆ ವಿಚಾರಣೆ ನಡೆಸಿದ್ದರು
ಪಶುವೈದ್ಯಾಧಿಕಾರಿಗಳ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಚುರುಕುಗೊಳಿಸುತ್ತಿದ್ದಂತೆ 10 ದಿನಗಳಿಂದ ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದ ಜ್ಞಾನೇಂದ್ರ ಕುಮಾರ್ ಶುಕ್ರವಾರ ಏಕಾಏಕಿ ಸಿಐಡಿ ಕಚೇರಿಯಲ್ಲಿ ಪ್ರತ್ಯಕ್ಷವಾಗಿದ್ದು, ಸುಮಾರು 11 ಗಂಟೆಗಳ ವಿಚಾರಣೆ ಎದುರಿಸಿದರು.
ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಜ್ಞಾನೇಂದ್ರ ಕುಮಾರ್ ಗುರುವಾರವೇ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ, ಗೈರಾಗಿದ್ದರು. ಹೀಗಾಗಿ ಶುಕ್ರವಾರ ವಿಚಾರಣೆಗೆ ಹಾಜರಾದ ಅವರನ್ನು ತನಿಖಾಧಿಕಾರಿ ರಾಘವೇಂದ್ರ ಹೆಗ್ಡೆ ಸುದೀರ್ಘ ವಿಚಾರಣೆ ನಡೆಸಿದರು.
ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಎಂಟ್ರಿಯಾಗುತ್ತಿದ್ದಂತೆ ಆಗಸ್ಟ್ 18ರಿಂದ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿದ್ದರು. ಪಶುವೈದ್ಯಾಧಿಕಾರಿಗಳ ಪರೀಕ್ಷೆ ನಡೆದಾಗ ಜ್ಞಾನೇಂದ್ರ ಕುಮಾರ್ ಆಯೋಗದ ಪರೀಕ್ಷಾ ನಿಯಂತ್ರಕರಾಗಿದ್ದರು. ಈ ವೇಳೆ ಪರೀಕ್ಷೆಯಲ್ಲಿ ಭಾರಿ ಅಕ್ರಮ ನಡೆದಿತ್ತು. ಆದ್ದರಿಂದ ಅಕ್ರಮದಲ್ಲಿ ಇವರ ಹೆಸರು ಬಲವಾಗಿ ಕೇಳಿಬಂದಿತ್ತು. ಜತೆಗೆ ಪ್ರಾಥಮಿಕ ತನಿಖೆಯಲ್ಲಿ ಉದ್ದೇಶಪೂರ್ವಕವಾಗಿ ಕೆಲವೊಂದು ಲೋಪದೋಷಗಳನ್ನು ಎಸಗಿರುವುದು ಕಂಡುಬಂದಿದೆ ಎನ್ನಲಾಗಿದೆ.

