ಬೆಳಗಾವಿ: ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ 6 ಸಾವಿರಕ್ಕೂ ಅಧಿಕ ಪೌರಕಾರ್ಮಿಕರಿಗೆ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ಇ-ಖಾತಾ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರಾಜ್ಯದ ಪೌರಕಾರ್ಮಿಕರು, ಲೋಡರ್ಸ್, ಯುಜಿಡಿ ಸಹಾಯಕರು, ಕ್ಲೀನರ್ ಗಳು ಸೇರಿದಂತೆ 6 ಸಾವಿರಕ್ಕೂ ಅಧಿಕ ಪೌರಕಾರ್ಮಿಕರಿಗೆ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದರು.
ಈ ಯೋಜನೆಗೆ ಒಟ್ಟು 6119 ಫಲಾನುಭವಿಗಳನ್ನು ಗುರುತಿಸಲಾಗಿದೆ. ರಾಜ್ಯ ಸರ್ಕಾರ ಇದಕ್ಕಾಗಿ 326 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಿದ್ದು, ಇದುವರೆಗೆ 4159 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಬೆಳಗಾವಿಯಲ್ಲಿ 172 ಮತ್ತು ವಿಜಯಪುರದಲ್ಲಿ 133 ಮನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಪೌರಕಾರ್ಮಿಕರ ಹೊರಗುತ್ತಿಗೆ ಪದ್ಧತಿಯನ್ನು 2017 ರಲ್ಲಿ ಸ್ಥಗಿತಗೊಳಿಸಿ, ಪೌರಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಳ್ಳಲು ಆದೇಶಿಸಲಾಗಿದೆ. ಕನಿಷ್ಠ 2 ವರ್ಷ ಸೇವೆ ಸಲ್ಲಿಸಿದವರಿಗೆ ವಿಶೇಷ ನೇಮಕಾತಿಯಡಿ ಅವಕಾಶ ನೀಡಲಾಗುತ್ತಿದೆ. ವಿವಿಧ ಹಂತಗಳಲ್ಲಿ ಸಾವಿರಾರು ಪೌರಕಾರ್ಮಿಕರ ನೇಮಕಕ್ಕೆ ಅನುಮತಿ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

