ಬೆಂಗಳೂರು : ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚಿ ಸಂಭವಿಸುವ ಅನಾಹುತ ತಪ್ಪಿಸಬೇಕು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ವಿಜಯಪುರದಲ್ಲಿ 2 ವರ್ಷದ ಬಾಲಕ ಸಾತ್ವಿಕ್ ಕೊಳವೆ ಬಾವಿಗೆ ಬಿದ್ದಿದ್ದು, ಅದೃಷ್ಟವಶಾತ್ ಬದುಕುಳಿದಿದ್ದಾನೆ. ಇಂತಹ ಘಟನೆಗಳು ಮರುಕಳಿಸದಂತೆ ಜನರು ಎಚ್ಚರವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆ ಪ್ರಶಂಸನೀಯ. ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ – ಹಾರೈಕೆಗಳು ಫಲಿಸಿದೆ, ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು. ನೀರು ಬಾರದ ಅಥವಾ ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಯಾರದೋ ಅಮಾಯಕ ಜೀವ ಬಲಿಯಾಗುತ್ತದೆ, ಇಂತಹ ಘಟನೆಗಳು ಕಾಲಕಾಲಕ್ಕೆ ಪುನರಾವರ್ತನೆಯಾಗುತ್ತಿದ್ದರೂ ಜನ ಜಾಗೃತರಾಗದೆ ನಿರ್ಲಕ್ಷ್ಯ ತೋರುವುದು ಬೇಸರದ ಸಂಗತಿ. ಸಮಾಜ ಈ ಬಗ್ಗೆ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದ್ದಾರೆ.
https://twitter.com/siddaramaiah/status/1775820500566213110