ಬೆಂಗಳೂರು: ಗ್ಯಾರಂಟಿ ಯೋಜನೆಗಳ ಅಮಿಷವೊಡ್ಡಿ ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಶಾಸಕ ಸ್ಥಾನ ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ವರುಣಾ ವಿಧಾನಸಭಾ ಕ್ಷೇತ್ರದ ಕೂಡನಹಳ್ಳಿಯ ಕೆ. ಶಂಕರ್ ಈ ಕುರಿತಾಗಿ ಸಲ್ಲಿಸಿದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ಅವರ ಪೀಠದಿಂದ ಈ ಆದೇಶ ನೀಡಲಾಗಿದೆ.
ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗೆ ಸಂಬಂಧಿಸಿದಂತೆ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳ ಹಸ್ತಪ್ರತಿಗೆ ಸಿದ್ದರಾಮಯ್ಯ ಸಹಿ ಮಾಡಿದ್ದಾರೆ. ಆ ಪ್ರಣಾಳಿಕೆಯನ್ನು ತನ್ನದೇ ಎಂದು ಅಳವಡಿಸಿಕೊಂಡಿದ್ದಾರೆ. ಈ ಮೂಲಕ ಭ್ರಷ್ಟಾಚಾರಕ್ಕೆ ಸಿದ್ದರಾಮಯ್ಯ ಜಂಟಿಯಾಗಿ ಮತ್ತು ಪ್ರತ್ಯೇಕವಾಗಿ ಹೊಣೆಗಾರರಾಗಿದ್ದರೆ. ಆದ್ದರಿಂದ ಅವರ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ವಾದಿಸಿದ್ದು, ಇದನ್ನು ಹೈಕೋರ್ಟ್ ತಿರಸ್ಕರಿಸಿದೆ.
2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ವತಿಯಿಂದ ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಮತದಾರರಿಗೆ ಆಮಿಷವೊಡ್ಡಲಾಗಿದೆ. ಇದು ಲಂಚಕ್ಕೆ ಸಮ. ಗ್ಯಾರಂಟಿ ಕಾರ್ಡಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಸಹಿ ಹಾಕಿದ್ದಾರೆ. ಈ ಮೂಲಕ ಭ್ರಷ್ಟಾಚಾರ ಎಸಗಿದ್ದಾರೆ. ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಅರ್ಜಿದಾರರು ಕೋರಿದ್ದರು.
ಪ್ರಣಾಳಿಕೆ ಅಥವಾ ಕರಪತ್ರದ ಮೂಲಕ ಪಕ್ಷವು ತನ್ನ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಮತದಾರರಿಗೆ ಮನವಿ ಮಾಡುತ್ತದೆ. ಅದಕ್ಕಾಗಿ ಪ್ರಣಾಳಿಕೆ ಮತ್ತು ಕರ ಪತ್ರದಿಂದ ಚುನಾವಣೆಯನ್ನು ಹೊರಗಿಡಲಾಗುವುದಿಲ್ಲ. ಇನ್ನು ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ತೋರಿಸಿದ ಮನವಿ, ಭರವಸೆ ಕಾರ್ಯಸಾಧುವಲ್ಲ ಎಂಬ ಅರ್ಜಿದಾರರ ಆರೋಪವನ್ನು ಅಭ್ಯರ್ಥಿಯ ಮೇಲೆ ಹೊರಿಸಲಾಗದು ಎಂದು ನ್ಯಾಯಪೀಠ ಹೇಳಿದೆ.