HomeKarnatakaನನ್ನ ಜೀವನ ತೆರೆದ ಪುಸ್ತಕವಿದ್ದಂತೆ: ಸಿಎಂ ಸಿದ್ಧರಾಮಯ್ಯ

ನನ್ನ ಜೀವನ ತೆರೆದ ಪುಸ್ತಕವಿದ್ದಂತೆ: ಸಿಎಂ ಸಿದ್ಧರಾಮಯ್ಯ

ರಾಮನಗರ: ಮಾಗಡಿ ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಕಾರ – ಬೆಂಬಲವನ್ನು ಕೊಡಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಇಂದು ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ನೂತನವಾಗಿ ನಿರ್ಮಾಣಗೊಂಡಿರುವ ಬೆಂಗಳೂರು ಹಾಲು ಒಕ್ಕೂಟದ ಮಾಗಡಿ ಶಿಬಿರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು.

ಬೆಂಗಳೂರಿನ ಹೊರವಲಯದಲ್ಲಿರುವ ಮಾಗಡಿ ಬಹಳ ಪ್ರಮುಖ ಪಟ್ಟಣ. ಕೆಂಪೇಗೌಡರ ರಾಜಧಾನಿಯಾಗಿದ್ದ ನಗರ. ಮಾಗಡಿ ಅಭಿವೃದ್ಧಿಯಾಗಬೇಕು ಎನ್ನುವ ವಾದದಲ್ಲಿ ನನ್ನ ಸಹಮತವೂ ಇದೆ. ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಆಚರಣೆಗೆ ತಂದು ಪ್ರಾಧಿಕಾರವನ್ನೂ ರಚನೆ ಮಾಡಿದ್ದೆ. ಇದರ ಉದ್ದೇಶ ಕೆಂಪೇಗೌಡರನ್ನು ಎಲ್ಲರೂ ಸ್ಮರಿಸಬೇಕು ಎನ್ನುವುದಾಗಿತ್ತು. ಒಕ್ಕಲಿಗರ ನಾಯಕರು ಎಂದು ಹೇಳಿಕೊಳ್ಳುವವರು ಇದನ್ನು ಮಾಡಲಿಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದವರು. ಅವರ ಜಯಂತ್ಯೋತ್ಸವವನ್ನು ಆಚರಿಸುವುದು ಸರ್ಕಾರದ ಕರ್ತವ್ಯ ಎಂದು ಭಾವಿಸಿ 2016-17 ರಲ್ಲಿ ಆಚರಣೆಗೆ ತಂದಿದ್ದು ನಮ್ಮ ಸರ್ಕಾರ. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ ಮೇಲೆ ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ ಎಂದು ಬಿಜೆಪಿಯವರು ಆರೋಪಿಸುತ್ತಿದ್ದಾರೆ. ಹಾಗಾದರೆ ಇಲ್ಲಿನ ಅಭಿವೃದ್ಧಿ ಕೆಲಸಗಳಿಗೆ 120 ಕೋಟಿ ರೂ.ಗಳ ಅನುದಾನವನ್ನು ಹೇಗೆ ಮೀಸಲಿಡಲಾಗಿದೆ ಎಂದು ಹೇಳಲಿ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಯವರು ಹಾಲಿಗೆ ಬೆಲೆ ಏರಿಸಲಾಗಿದೆ ಎಂದು ಆರೋಪಿಸಿದರು ರೈತರಿಂದ ಹಾಲು ಖರೀದಿಸಿ, ಅವರಿಗೆ ಹಣ ನೀಡುವುದು ಬೇಡವೇ? ಹಾಲಿನ ಪ್ರಮಾಣ ಹೆಚ್ಚಿಸಿ, ಅದಕ್ಕೆ ಸಮನಾಗಿ ಬೆಲೆ ಹೆಚ್ಚಿಸಿ ರೈತರಿಗೆ ನೆರವಾಗಿದ್ದು ತಪ್ಪಾ? ಹಾಲಿಗೆ 5 ರೂ. ಪ್ರೋತ್ಸಾಹಧನ ಘೋಷಿಸಿದ್ದು ನಮ್ಮ ಸರ್ಕಾರ. ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದು ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ. ಏನೂ ಮಾಡದೇ ಕೆಲವರು ತಾವು ರೈತರ ಮಕ್ಕಳು, ಮಣ್ಣಿನ ಮಕ್ಕಳು ಎನ್ನುತ್ತಾರೆ ಎಂದು ಬಿಜೆಪಿಯನ್ನು ಟೀಕಿಸಿದ್ದಾರೆ.

ಶಕ್ತಿ ಯೋಜನೆಯಡಿ 3.50 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, ಇದುವರೆಗೆ 287 ಕೋಟಿ ಪ್ರಯಾಣಿಕರು ಈ ಯೋಜನೆಯ ಲಾಭ ಪಡೆದಿದ್ದಾರೆ. ನಾನು ಬಡವರ ಏಳಿಗೆಗಾಗಿಯೇ ಅಧಿಕಾರದಲ್ಲಿರುವುದು. ನಮ್ಮ ಸರ್ಕಾರ ಹಾಲು ಉತ್ಪಾದಕರ, ದಲಿತರ, ಅಲ್ಪಸಂಖ್ಯಾತರ, ಬಡವರ ಪರವಾಗಿದೆ. ನನ್ನ ಜೀವನ ತೆರೆದ ಪುಸ್ತಕವಿದ್ದಂತೆ. ರಾಜ್ಯದ ಜನರ ಅಭಿವೃದ್ಧಿಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವ ಪ್ರಶ್ನೆಯಿಲ್ಲ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular