ಬೆಂಗಳೂರು: ಕೇವಲ ಒಂದೇ ವಾರದಲ್ಲಿ ದೇಶದಾದ್ಯಂತ ಭಾರಿ ಸಂಚಲನ ಸೃಷ್ಟಿಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ ನಾಳೆ ಮೇ 24ರಂದು ಆಯೋಜಿಸಿದ್ದ ಮಾಅನವ ಸರಪಳಿ ನಿರ್ಮಾಣ ಕಾರ್ಯಕ್ರಮಕ್ಕೆ ಬೆಂಗಳೂರು ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ.
ಬೆಂಗಳೂರಿನ ಟೌನ್ ಹಾಲ್ ಬಳಿ ಆಯೋಜಿಸಲು ನಿರ್ಧರಿಸಿದ್ದ ಶಾಂತಿಯುತ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮಕ್ಕೆ ಬೆಂಗಳೂರು ಪೊಲೀಸ್ ಇಲಾಖೆ ಅನುಮತಿ ನೀಡಿಲ್ಲ. ಟೌನ್ ಹಾಲ್ ಬಳಿ ಇಂತಹ ಕಾರ್ಯಕ್ರಮಗಳ ಆಯೋಜನೆಗೆ ಅನುಮತಿಯಿಲ್ಲ ಎಂದು ಬೆಂಗಳೂರು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.
ಮಾನವ ಸರಪಳಿ ನಿರ್ಮಾಣದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳು ಹರಿದಾಡುತ್ತಿರುವುದನ್ನ ಗಮನಿಸಿರುವ ಬೆಂಗಳೂರು ಪೊಲೀಸರು, ಈ ರೀತಿ ಕಾರ್ಯಕ್ರಮ ಆಯೋಜಿಸುವ ಬಗ್ಗೆ ಈವರೆಗೂ ಮನವಿ ಬಂದಿಲ್ಲ, ಒಂದು ವೇಳೆ ಮನವಿ ಬಂದರೂ ಟೌನ್ ಹಾಲ್ ಬಳಿ ಅನುಮತಿ ನೀಡವುದಿಲ್ಲ ಎಂದು ತಿಳಿಸಿದ್ದಾರೆ.
ಟೌನ್ ಹಾಲ್ ಬಳಿ ಕಾರ್ಯಕ್ರಮ ಆಯೋಜನೆಗೆ ಅನುಮತಿ ಕೋರಿ ಯಾವುದೇ ವ್ಯಕ್ತಿ, ಸಂಘಟನೆ ಅಥವಾ ಪಕ್ಷದಿಂದ ಪೊಲೀಸ್ ಇಲಾಖೆಗೆ ಅರ್ಜಿ ಬಂದಿಲ್ಲ. ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ಹೊರತುಪಡಿಸಿ ಬೇರೆ ಯಾವುದೇ ಸ್ಥಳಗಳಲ್ಲಿ ಧರಣಿ, ಪ್ರತಿಭಟನಾ ಮೆರವಣಿಗೆಗಳನ್ನ ನಡೆಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಆದ್ದರಿಂದ ಟೌನ್ ಹಾಲ್ ಬಳಿ ಕಾರ್ಯಕ್ರಮ ಆಯೋಜನೆಗೆ ಅನುಮತಿ ನೀಡುವುದಿಲ್ಲ. ಸಾರ್ವಜನಿಕರು ಇಂತ ಪೋಸ್ಟ್‌ಗಳನ್ನ ಹಂಚಿಕೊಳ್ಳಬಾರದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಕಾಕ್ರೋಚ್ ಜನತಾ ಪಾರ್ಟಿಯು ಮೇ 24ರಂದು ಬೆಳಗ್ಗೆ 11 ಗಂಟೆಗೆ ಟೌನ್ಹಾಲ್ ಬಳಿ ಶಾಂತಿಯುತ ಮಾನವ ಸರಪಳಿ ನಿರ್ಮಾಣ ಮಾಡಲು ಕರೆ ನೀಡಿದ್ದು, ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

