ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಹೊಸದಾಗಿ ಎಲ್ಲೆಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಬೇಕು ಎಂಬುದರ ಕುರಿತು ರಾಷ್ಟ್ರೀಯ ಆರೋಗ್ಯ ನೀತಿ ಮಾನದಂಡಗಳನ್ವಯ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಡಾ. ಹಿಮಾಂಶು ಭೂಷಣ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ.
ರಾಜ್ಯದಲ್ಲಿ ಎಲ್ಲೆಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಬೇಕು ಎಂಬುದರ ಬಗ್ಗೆ ಐಪಿಹೆಚ್‍ಎಸ್ ಮಾರ್ಗಸೂಚಿ ಹಾಗೂ ರಾಷ್ಟ್ರೀಯ ಆರೋಗ್ಯ ನೀತಿ ಮಾನದಂಡಗಳನ್ವಯ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ನಿವೃತ್ತ ಅಧಿಕಾರಿ ಡಾ. ಹಿಮಾಂಶು ಭೂಷಣ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿಯ ಮಾರ್ಗದರ್ಶನದಂತೆ ಮೊದಲ ಹಂತದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ವಿಭಾಗದಲ್ಲಿ ಆಸ್ಪತ್ರೆಗಳನ್ನು ಮಂಜೂರು ಮಾಡಲು ಅಥವಾ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗಿದೆ. ಉಳಿದಂತೆ ಇದೇ ಸಮಿತಿಯ ವರದಿ ಆಧಾರದಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ವಹಿಸಲಾಗುವುದು.
2022ರ ಮಾರ್ಗಸೂಚಿಯನ್ವಯ ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳನ್ನು ಜನಸಂಖ್ಯೆ ಆಧಾರದ ಮೇಲೆ ಸ್ಥಾಪಿಸಲಾಗುತ್ತಿದ್ದು, ಸಮತಟ್ಟು ಪ್ರದೇಶದಲ್ಲಿ 1,20,000 ಜನಸಂಖ್ಯೆಗೆ ಹಾಗೂ ಗುಡ್ಡಗಾಡು ಗಿರಿಜನ ಪ್ರದೇಶದಲ್ಲಿ 80,000 ಜನಸಂಖ್ಯೆಗೆ ಅನುಗುಣವಾಗಿ ಸ್ಥಾಪಿಸಲಾಗುತ್ತಿದೆ.
ನಗರೀಕರಣದ ಕಾರಣದಿಂದ ನಗರ, ಪಟ್ಟಣ ಪ್ರದೇಶಗಳಲ್ಲಿ ಜನಸಂಖ್ಯೆಯಲ್ಲಿ ತೀವ್ರ ಹೆಚ್ಚಳವಾಗುತ್ತಿದ್ದು, ಗ್ರಾಮೀಣ ಭಾಗಗಳಲ್ಲಿ ಜನಸಂಖ್ಯೆ ಕುಸಿತ ಕಂಡುಬರುತ್ತಿದೆ. ಹೀಗಾಗಿ ಜನಸಂಖ್ಯೆಯನ್ನು ಪರಿಗಣಿಸುವ ವಿಷಯದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ, ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಡಾ.ಚಂದ್ರು ಲಮಾಣಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉತ್ತರ ನೀಡಿದ್ದಾರೆ.
