ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಬಳಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಮಾತನಡಿದ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾತೆ, ಇದು ಗಾಂಧಿ ಕುಟುಂಬ ಹಾಗೂ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿ ನಡೆಸಿರುವ ಷಡ್ಯಂತ್ರ. ಇದು 12 ವರ್ಷಗಳ ಹಿಂದಿನ ಪ್ರಕರಣ. ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿದ್ದಾರೆ. ಅಲ್ಲಿ ಒಂದು ನಯಾಪೈಸೆಯೂ ವರ್ಗಾವಣೆಯಾಗಿಲ್ಲ. ಕೇಂದ್ರ ಸರ್ಕಾರ ಗಾಂಧಿ ಕುಟುಂಬ ಹಾಗೂ ಕಾಂಗ್ರೆಸ್ ಪಕ್ಷ ಹತ್ತಿಕ್ಕಲು ಇಡಿಯನ್ನು ಬಳಸಿಕೊಂಡು ಈ ರೀತಿ ನಡೆದುಕೊಳ್ಳುತ್ತಿದೆ ಎಂದು ಕಿಡಿಕಾರಿದ್ದಾರೆ.
ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಕಾರ್ಯಕರ್ತರು ಕೂಡ ಬೆಂಗಳೂರಿನ ಇಡಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದು, ಇಡಿ ಅಧಿಕಾರಿಗಳ ಕ್ರಮವನ್ನು ಖಂಡಿಸಿದ್ದಾರೆ.