ಬೆಳಗಾವಿ: ಒಂದೆಡೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸಿದ್ದರೆ ಮತ್ತೊಂದೆಡೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ನೇತೃತ್ವದಲ್ಲಿ ಬೆಳಗಾವಿ ನಗರದ ಕಾಂಗ್ರೆಸ್ ಭವನದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ದಾರಿಯುದ್ದಕ್ಕೂ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಭಿತ್ತಿ ಪತ್ರ ಹಿಡಿದು ಪ್ರಧಾನಿ ಮೋದಿ ಸರ್ಕಾರದ ವಿರುದ್ದ ಘೋಷಣೆ ಕೂಗಿಮಾತನಾಡಿದ ರಾಹುಲ್ ಜಾರಕಿಹೊಳಿ, ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್‍ನ ಅಬಕಾರಿ ಸುಂಕವನ್ನು ರೂ.2 ಹೆಚ್ಚಳ ಮಾಡುವುದರ ಮೂಲಕ, ಅಡುಗೆ ಅನಿಲ ದರ ಹೆಚ್ಚಿಸುವ ಮೂಲಕ ಬಡವರ ಬದುಕಿಗೆ ಕೊಳ್ಳಿ ಇಟ್ಟಿದೆ ಎಂದು ಕಿಡಿಕಾರಿದರು.
ತೈಲ ದರದಿಂದ ಹಿಡಿದು ಎಲ್ಲಾ ಅಗತ್ಯವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದವರು ಜೀವನ ನಡೆಸುವುದು ದುಸ್ಥರವಾಗಿದೆ. ಬೆಲೆ ಏರಿಕೆಯಿಂದಾಗಿ ಹಣದುಬ್ಬರ ಹಾಗೂ ನಿರುದ್ಯೋಗ ಹೆಚ್ಚಾಗುತ್ತದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ತಕ್ಷಣ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.