ಬೆಂಗಳೂರು: ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಂಧನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ದೇಶಾದ್ಯಂತ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಕೈ ಕಾರ್ಯಕರ್ತರ ಪ್ರತಿಭಟನೆ ತೀವ್ರಗೊಂಡಿದೆ.
ನೀಟ್ ಪ್ರೆಶ್ನೆ ಪತ್ರಿಕೆ ಸೋರಿಕೆ ಅಕ್ರಮ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ಹಾಗೂ ವಿದ್ಯಾರ್ಥಿಗಳು ದೆಹಲಿಯ ಜಂತರ್-ಮಂತರ್ ನಲ್ಲಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರು ಯುವಜನತೆ, ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸಿದ್ದನ್ನು ಖಂಡಿಸಿ ಜುಲೈ 21ರಂದು ಲೋಕಸಭಾ ವಿಪಕ್ಷ ನಾಯಕ್ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದ್ದರು. ಪ್ರಧಾನಿ ನರೇಂದ್ರ ಮೋದಿ ನಿವಾಸದ ಎದುರು ಧರಣಿ ನಡೆಸಿದ್ದರು. ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವವರೆಗೂ ಸ್ಥಳದಿಂದ ಕದಲುವುದಿಲ್ಲ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು ಹಿಡಿದು ಕುಳಿತಿದ್ದರು. ಈ ವೇಳೆ ಪೊಲೀಸರು ರಾಹುಲ್ ಗಾಂಧಿಯವರನ್ನು ವಶಕ್ಕೆ ಪಡೆದು ಎಳೆದುಕೊಂಡು ಹೋಗಿದ್ದರು.
ರಾಹುಲ್ ಗಾಂಧಿ ಬಂಧನ ಖಂಡಿಸಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿ ಎದುರು ಜಮಾವಣೆಗೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಬಿಜೆಪಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಪ್ರಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪೊಲೀಸರ್ ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

