ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಇಂದು ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.
ದಾವಣಗೆರೆ ದಕ್ಷಿಣಕ್ಕೆ ಸಮರ್ಥ್ ಮತ್ತು ಬಾಗಲಕೋಟೆಗೆ ಉಮೇಶ್ ಮೇಟಿ ಅವರ ಹೆಸರನ್ನು ಬಹುತೇಕ ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರಣಿ ಸಭೆಗಳನ್ನು ನಡೆಸಿ, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದಾರೆ. ಈ ಬಾರಿ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಹಲವು ಮುಖಂಡರು ಪಟ್ಟು ಹಿಡಿದಿದ್ದರು. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೇರಿದಂತೆ ಹಲವು ನಾಯಕರು ಶಾಮನೂರು ಶಿವಶಂಕರಪ್ಪ ಪ್ರತಿನಿಧಿಸಿದ್ದ ಕ್ಷೇತ್ರದಲ್ಲಿ ಅವರ ಮೊಮ್ಮಗ ಸಮರ್ಥ್ ಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದರು.
ಹೀಗಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿತ್ತು. ಎರಡು ಗುಂಪುಗಳ ಪ್ರಮುಖರ ಸಭೆ ನಡೆಸಿದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮತ್ತು ಸುರ್ಜೇವಾಲಾ ಅಂತಿಮವಾಗಿ ಮುಸ್ಲಿಂ ಸಮುದಾಯದ ಮುಖಂಡರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಮರ್ಥ್ ಗೇ ಟಿಕೆಟ್ ಸಿಗುವುದು ಬಹುತೇಕ ಖಚಿತವಾಗಿದೆ. ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ಅಭ್ಯರ್ಥಿಯ ಆಯ್ಕೆ ಬೆಳೆ ಅಲ್ಪಸಂಖ್ಯಾತ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕು ಎಂದು ಮುಸ್ಲಿಂ ಸಮುದಾಯದ ಮುಖಂಡರು ಷರತ್ತು ಹಾಕಿದ್ದು ಇದಕ್ಕೆ ಸಮ್ಮತಿಸಲಾಗಿದೆ.
ಇನ್ನು ಬಾಗಲಕೋಟೆ ಕ್ಷೇತ್ರದಲ್ಲಿ ಹೆಚ್.ವೈ. ಮೇಟಿ ಪುತ್ರ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲು ಸಮ್ಮತಿಸಲಾಗಿದೆ. ಮೇಟಿಯವರ ಕುಟುಂಬ ಸದಸ್ಯರ ನಡುವೆ ಟಿಕೆಟ್ ಗಾಗಿ ಪೈಪೋಟಿ ಇತ್ತು. ಸಿಎಂ ಮತ್ತು ಡಿಸಿಎಂ ಮೇಟಿ ಕುಟುಂಬದವರೊಂದಿಗೆ ಚರ್ಚಿಸಿ ಉಮೇಶ್ ಮೇಟಿಗೆ ಟಿಕೆಟ್ ನೀಡಲು ಅಂತಿಮಗೊಳಿಸಿದ್ದಾರೆ. ಇಂದು ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗುವುದು ಎಂದು ಹೇಳಲಾಗಿದೆ.

