ಬೆಂಗಳೂರು: ಕರ್ನಾಟಕ ಕಾಂಗ್ರೆಸ್ನಲ್ಲಿ ಮತ್ತೆ ‘ಡಿನ್ನರ್ ಪಾಲಿಟಿಕ್ಸ್’ ಜೋರಾಗಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೆಲ ದಿನಗಳ ಹಿಂದೆ ಡಿನ್ನರ್ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸಚಿವರಿಗೆ ವಿಶೇಷ ಔತಣಕೂಟ ಏರ್ಪಡಿಸಿದ್ದಾರೆ.
ಮಾರ್ಚ್ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ಸಚಿವರಿಗೆ ಡಿನ್ನರ್ ಪಾರ್ಟಿ ಆಯೋಜಿಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಸಮಯದಲ್ಲೇ ಕಾಂಗ್ರೆಸ್ ಆಂತರಿಕ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಡಿನ್ನರ್ ಮೀಟಿಂಗ್ ಆಯೋಜಿಸಿದ್ದರು. ಅದರ ಬೆನ್ನಲ್ಲೇ ಸಿಎಂ ಮತ್ತು ಡಿಸಿಎಂ ಬಣಗಳಿಗೆ ಸೇರಿರುವ ಕೆಲವು ಶಾಸಕರು ಪ್ರತ್ಯೇಕವಾಗಿ ಸಭೆ ನಡೆಸಿದ್ದು ರಾಜಕೀಯ ಚರ್ಚೆಗೆ ಕಾರಣವಾಗಿತ್ತು. ಈ ಸಭೆಯಲ್ಲಿ ಸಚಿವ ಸ್ಥಾನ ಆಕಾಂಕ್ಷಿ ಶಾಸಕರು ಸಂಪುಟ ಪುನರ್ರಚನೆಗಾಗಿ ಒತ್ತಡ ಹೇರುವ ತಂತ್ರಗಾರಿಕೆ ನಡೆಸಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಈ ಬೆಳವಣಿಗೆಗಳ ನಡುವೆಯೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರಿಗೆ ಡಿನ್ನರ್ ಕೂಟ ಆಯೋಜಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
ಡಿನ್ನರ್ ಸಭೆಯಲ್ಲಿ ಮುಂದಿನ ರಾಜಕೀಯ ತಂತ್ರಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ, ಜಿಬಿಎ ಚುನಾವಣೆಗಳ ತಯಾರಿ, ಒಳಮೀಸಲಾತಿ ವಿಚಾರ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆಯಾಗಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಶೀಘ್ರದಲ್ಲೇ ಘೋಷಣೆಯಾಗಬಹುದಾದ ಪಂಚ ರಾಜ್ಯಗಳ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಗಳಲ್ಲಿ ಯಾರು ಭಾಗವಹಿಸಬೇಕು ಎಂಬುದರ ಕುರಿತಾಗಿಯೂ ಚರ್ಚೆ ನಡೆಯುವ ಸಾಧ್ಯತೆ ಇದೆ. ಒಟ್ಟಾರೆ ಡಿಸಿಎಂ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕೂಡ ಡಿನ್ನರ್ ಪಾರ್ಟಿ ಆಯೋಜಿಸಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

