ನವದೆಹಲಿ: ಭಾರತ ಮತ್ತು ಪಾಕಿಸ್ತಾನಗಳ ನಡುವೆ ಸಂಘರ್ಷ ಹೆಚ್ಚಾಗುತ್ತಿದ್ದು, ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಥವಾ ಗ್ಯಾಸ್ ಕೊರತೆಯಾಗಲಿದೆ ಎಂಬ ಆತಂಕದಿಂದ ಜನ ಪೆಟ್ರೋಲ್ ಬಂಕ್ ಗಳಿಗೆ ಮುಗಿಬಿದ್ದಿದ್ದಾರೆ. ವಾಹನಗಳಿಗೆ ಪೆಟ್ರೋಲ್, ಡೀಸೆಲ್ ತುಂಬಿಸಿಕೊಳ್ಳುತ್ತಿದ್ದಾರೆ.
ಆದರೆ, ದೇಶದಲ್ಲಿ ಪೆಟ್ರೋಲ್, ಡೀಸೆಲ್ ಅಥವಾ ಗ್ಯಾಸ್ ನ ಯಾವುದೇ ಕೊರತೆ ಇಲ್ಲ, ಸಾಕಷ್ಟು ದಾಸ್ತಾನು ಲಭ್ಯವಿದೆ ಎಂದು ತೈಲ ಸಂಸ್ಥೆಗಳು ಸ್ಪಷ್ಟೀಕರಣ ನೀಡಿದೆ.
ಭಾರತ-ಪಾಕಿಸ್ತಾನ ಸಂಘರ್ಷ ಹೆಚ್ಚಾದ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ಕೊರತೆ ಆಗಬಹುದೆಂದು ಜನ ಆತಂಕಕ್ಕೆ ಒಳಗಾಗಿದ್ದಾರೆ. ಜಾಲತಾಣಗಳಲ್ಲಿ ಇಂತಹ ವದಂತಿ ಹರಡಿ ಪೆಟ್ರೋಲ್ ಬಂಕ್ ಗಳ ಮುಂದೆ ಜನ ಸಾಲುಗಟ್ಟಿ ನಿಂತಿದ್ದರು. ಈ ಹಿನ್ನೆಲೆಯಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಸ್ಪಷ್ಟನೆ ನೀಡಿದ್ದು, ದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ದಾಸ್ತಾನು ಲಭ್ಯವಿದೆ. ಯಾರೂ ಆತಂಕ ಪಡಬೇಕಿಲ್ಲ ಎಂದು ತಿಳಿಸಲಾಗಿದೆ.