ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆ ಆರ್ಭಟ ಮುಂದುವರೆದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.
ಕೊಡಗು ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ರಜೆ ಘೋಷಣೆ ಮಾಡಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಇಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ ಆದೇಶ ಹೊರಡಿಸಿದ್ದಾರೆ ಪದವಿ ಪೂರ್ವ, ಪದವಿ ಕಾಲೇಜುಗಳು ಎಂದಿನಂತೆ ನಡೆಯಲಿವೆ.
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ರಜೆ ಘೋಷಣೆ ಮಾಡಿ ಬಂಟ್ವಾಳ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ಮಳೆ ಹಿನ್ನೆಲೆ ಮಂಗಳೂರು, ಮುಲ್ಕಿ, ಮೂಡಬಿದ್ರೆ, ಉಳ್ಳಾಲ ಹಾಗೂ ಬಂಟ್ವಾಳ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಆಯಾ ತಹಶೀಲ್ದಾರ್ ಗಳು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಐದು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.