ಬೆಂಗಳೂರು: ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಅವರು ನೇಪಾಳದ ಧಾರ್ಮಿಕ ಸ್ಥಳಗಳಿಗೆ ಪ್ರವಾಸ ಕೈಗೊಂಡಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.
ಮೇ 27ರಿಂದ 30ರವರೆಗೆ ನೇಪಾಳದ ಪಶುಪತಿ ನಾಥ ದೇವಾಲಯ ಸೇರಿ ಕೆಲವು ಧಾರ್ಮಿಕ ಸ್ಥಳಗಳಿಗೆ ತೆರಳಲು ನ್ಯಾಯಾಲಯ ಅನುಮತಿ ನೀಡಿದೆ. 2024ರ ಮೇನಲ್ಲಿ ಮಹಿಳೆಯೊಬ್ಬರನ್ನು ಅಪಹರಿಸಿದ್ದ ಆರೋಪ ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣ ಆರೋಪಿಯಾಗಿ ಜೈಲಿಗೆ ಹೋಗಿದ್ದರು.
ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಅನುಮತಿ ಇಲ್ಲದೆ ದೇಶ ಬಿಟ್ಟು ತೆರಳುವಂತಿಲ್ಲ ಎನ್ನುವ ಷರತ್ತು ವಿಧಿಸಿತ್ತು. ನೇಪಾಳದ ಕಾಠ್ಮಂಡುವಿನ ಪಶುಪತಿನಾಥ ದೇವಾಲಯ ಸೇರಿದಂತೆ ವಿವಿಧ ಪ್ರದೇಶಗಳಿಗೆ ರೇವಣ್ಣ ಪ್ರವಾಸ ಕೈಗೊಂಡಿದ್ದು, ಅನುಮತಿ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅವರ ಮನವಿ ಪುರಸ್ಕರಿಸಿದ ನ್ಯಾಯಾಲಯ ವಿದೇಶದಿಂದ ವಾಪಸ್ ಬಂದ ಬಳಿಕ ಕಡ್ಡಾಯವಾಗಿ ಮಾಹಿತಿ ನೀಡಬೇಕು ಎಂದು ಸೂಚಿಸಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಸಂತ್ರಸ್ತೆಯನ್ನು ಅಪರಿಸಿ ಬೆದರಿಕೆ ಹಾಕಿದ್ದ ಆರೋಪ ಸಂಬಂಧ ಕೆಆರ್ ನಗರ ಠಾಣೆಯಲ್ಲಿ ರೇವಣ್ಣ ವಿರುದ್ಧ ದೂರು ದಾಖಲಾಗಿತ್ತು. ಪ್ರಕರಣದಲ್ಲಿ ರೇವಣ್ಣ ಮೊದಲ ಆರೋಪಿಯಾಗಿದ್ದಾರೆ. ಪ್ರಕರಣದ ತನಿಖೆ ಪೂರ್ಣಗೊಳಿಸಿದ ಸಿಐಡಿ ಎಸ್ಐಟಿ ತಂಡ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

