ಬೀದರ್: ಜಿಲ್ಲೆಯ ಭಾಲ್ಕಿ ಮೂಲದ ಮಹಿಳೆಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಮಹಿಳೆಯ ಆರೋಗ್ಯದಲ್ಲಿ ಅಸ್ವಸ್ಥತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಮಾದರಿಯನ್ನು (ಸ್ಯಾಂಪಲ್) ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ.
ಸೋಂಕು ದೃಢಪಟ್ಟ ತಕ್ಷಣ ಮಹಿಳೆಯನ್ನು ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್) ಆಸ್ಪತ್ರೆಯ ವಿಶೇಷ ವಾರ್ಡ್ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಸೋಂಕಿತರ ಆರೋಗ್ಯದ ಮೇಲೆ ನಿರಂತರ ನಿಗಾ ವಹಿಸಿದ್ದು, ಅಗತ್ಯ ಚಿಕಿತ್ಸೆ ಮುಂದುವರಿಸಿದ್ದಾರೆ.
ಆರೋಗ್ಯ ಇಲಾಖೆ ಹೈ ಅಲರ್ಟ್
ಕೊರೊನಾ ಪ್ರಕರಣ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಿದೆ. ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಪತ್ತೆಹಚ್ಚುವ (ಕಾಂಟ್ಯಾಕ್ಟ್ ಟ್ರೇಸಿಂಗ್) ಕಾರ್ಯ ಆರಂಭಿಸಲಾಗಿದ್ದು, ಅಗತ್ಯ ಪರೀಕ್ಷೆ ಮತ್ತು ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಜ್ವರ, ಕೆಮ್ಮು, ಗಂಟಲು ನೋವು ಅಥವಾ ಉಸಿರಾಟದ ತೊಂದರೆ ಕಂಡುಬಂದರೆ ಕೂಡಲೇ ಸಮೀಪದ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.

