ಬಿಬಿಎಂಪಿ ವ್ಯಾಪ್ತಿಯಲ್ಲಿ 84 ಲಕ್ಷ, ಕಿದ್ವಾಯಿಯೊಂದರಲ್ಲೇ 24 ಲಕ್ಷ ಆರ್ ಟಿಪಿಸಿಆರ್ ಪರೀಕ್ಷೆ: ಬಿಜೆಪಿ ಅವಧಿಯಲ್ಲಿನ ಕೋವಿಡ್ ಟೆಸ್ಟ್ ಬಗ್ಗೆ ಅನುಮಾನ ಎಂದ ಡಿಸಿಎಂ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಕೋವಿಡ್ ಅಕ್ರಮದಲ್ಲಿ ಕುನ್ಹಾ ಅವರ ಸಮಿತಿ ಶಿಫಾರಸ್ಸಿನಂತೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್ ಹಣ ತಿಂದವರನ್ನು ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ನ್ಯಾಯಮೂರ್ತಿ ಮೈಖಲ್ ಕುನ್ಹ ವಿಚಾರಣೆ ಆಯೋಗದ ಶಿಫಾರಸ್ಸು ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಉಸ್ತುವಾರಿ ಹಾಗೂ ಅಧಿಕಾರಿಗಳ ಸಮಿತಿ ವರದಿ ಪರಾಮರ್ಶೆ ಹಾಗೂ ಶಿಫಾರಸ್ಸು ಕುರಿತು ವಿಧಾನಸೌಧದಲ್ಲಿ ಉಪಸಮಿತಿಯ ಸಭೆ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಮ್ಮ ಸರ್ಕಾರ ಕೋವಿಡ್ ಅವಧಿಯಲ್ಲಿನ ಅಕ್ರಮದ ಕುರಿತ ನ್ಯಾ.ಜಾನ್ ಮೈಕಲ್ ಕುನ್ಹಾ ಅವರ ವರದಿಯನ್ನು ಸ್ವೀಕರಿಸಿದ್ದೇವೆ. ಈ ವರದಿಯ ಪರಿಶೀಲನೆಯನ್ನು ಮಾತ್ರ ನಾವು ಮಾಡುತ್ತಿದ್ದೇವೆ. ಉಳಿದಂತೆ ಸಮಿತಿ ವರದಿಯ ಶಿಫಾರಸ್ಸಿನಂತೆ ಕಾನೂನು ಚೌಕಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದರು.

ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ತಪ್ಪು ನಡೆದಿಲ್ಲ ಎಂದು ವರದಿ ನೀಡಿದ್ದನ್ನು ನಮ್ಮ ಸರ್ಕಾರ ಒಪ್ಪುವುದಿಲ್ಲ. ಹೀಗಾಗಿ ಈ ಪ್ರಕರಣದ ಬಗ್ಗೆ ಮತ್ತೆ ತನಿಖೆಯಾಗಬೇಕು. ನಾನು ಹಾಗೂ ಸಿದ್ದರಾಮಯ್ಯ ಅವರೇ ಆ ಆಸ್ಪತ್ರೆಗೆ ಹೋಗಿ ಅಲ್ಲಿನ ಪರಿಸ್ಥಿತಿ ಅಲೋಕನ ಮಾಡಿದ್ದೆವು. 36 ಜನ ಸತ್ತರೆ, ಆಗಿನ ಸಚಿವರು ಕೇವಲ ಮೂರು ಮಂದಿ ಸತ್ತಿದ್ದರು ಎಂದು ಹೇಳಿದ್ದರು. ನಾನು ಮೃತಪಟ್ಟ 36 ಮಂದಿಯ ಮನೆಗಳಿಗೆ ಭೇಟಿ ನೀಡಿದ್ದೇನೆ.

ಈ ವಿಚಾರವಾಗಿ ಬೆಳಗಾವಿಯಲ್ಲಿ ಸಭೆ ಮಾಡಿ ಈ ವಿಚಾರಣೆ ಪ್ರಕ್ರಿಯೆ ಪರಿಶೀಲಿಸುತ್ತೇವೆ. ಈ ಸಮಿತಿಯು ಅಧಿಕಾರಿಗಳ ವಿಚಾರಣೆ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನಿಷ್ಪಕ್ಷಪಾತವಾಗಿ ತನಿಖೆ ಮಾಡುವಂತೆ ಅಧಿಕಾರಿಗಳಿಗೆ ಸ್ವಾತಂತ್ರ್ಯ ನೀಡಲಾಗಿದೆ ಎಂದರು.

ಬೆಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಆರ್ ಟಿಪಿಸಿಆರ್ ಪರೀಕ್ಷೆ ಮಾಡಲಾಗಿದ್ದು, 84 ಲಕ್ಷ ಪರೀಕ್ಷೆ ಮಾಡಲಾಗಿದೆ ಎಂದು ಹೇಳಿ 502 ಕೋಟಿ ಬಿಲ್ ಮಾಡಿದ್ದಾರೆ. 400 ಕೋಟಿ ಪಾವತಿ ಮಾಡಲಾಗಿದೆ. 84 ಲಕ್ಷ ಎಂದರೆ ಬೆಂಗಳೂರಿನಲ್ಲಿರುವ ಪ್ರತಿ ಮನೆಗೆ ಇಬ್ಬರಿಗೆ ಪರೀಕ್ಷೆ ಮಾಡಿರಬೇಕು. ಕಿದ್ವಾಯಿ ಸಂಸ್ಥೆಯೊಂದರಲ್ಲೇ 24 ಲಕ್ಷ ಪರೀಕ್ಷೆ ಮಾಡಲಾಗಿದೆ ಎಂದು ಹೇಳಿದ್ದಾರೆ. ತಾಂತ್ರಿಕವಾಗಿ ಸಮರ್ಥವಿಲ್ಲದೆ, ಐಸಿಎಂಆರ್ ಅನುಮತಿ ಇಲ್ಲದೆ ಪರೀಕ್ಷೆ ನಡೆಸಲಾಗಿದೆ. 146 ಕೋಟಿ ಬಿಲ್ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 24 ಲಕ್ಷ ಜನರಿಗೆ ಒಂದೇ ಕಡೆ ಪರೀಕ್ಷೆ ಎಂದರೆ ಅಲ್ಲಿ ಎಷ್ಟು ಜನದಟ್ಟಣೆ, ಸರದಿ ಸಾಲು ಇರಬೇಕು. ಹೀಗಾಗಿ ಈ ವಿಚಾರದಲ್ಲಿ ವಿಧಾನಸೌಧದಿಂದ ಕೆಳ ಹಂತದವರೆಗೂ ಯಾವ ರೀತಿ ಪ್ರಕ್ರಿಯೆ ಮಾಡಿದ್ದಾರೆ. ಕಾನೂನು ಚೌಕಟ್ಟು ಮೀರಿ ಏನೆಲ್ಲಾ ತೀರ್ಮಾನ ಮಾಡಿದ್ದಾರೆ ಎಂಬುದರ ಬಗ್ಗೆ ಅಧಿಕಾರಿಗಳು ವರದಿ ನೀಡಿದ್ದಾರೆ. ಈ ವರದಿಯನ್ನು ನಾವು ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read